Sandalwood News | ಚಂದನವನದಲ್ಲಿ ʼನ್ಯಾಯಬೆಲೆ ಅಂಗಡಿʼ ತೆರೆಯುತ್ತಿದ್ದಾರೆ ರಾಗಿಣಿ!
ಈಗಾಗಲೇ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಬಹುತೇಕ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸಿನೆಮಾದ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದೆ.;
ಕನ್ನಡ ಚಿತ್ರರಂಗದಲ್ಲಿ ‘ತುಪ್ಪ’ದ ಹುಡುಗಿ ಎಂದೇ ಜನಪ್ರಿಯರಾಗಿರುವ ರಾಗಿಣಿ ದ್ವಿವೇದಿ, ಇದುವರೆಗೂ ಸಾಕಷ್ಟು ಗ್ಲಾಮರಸ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಎಂಬ ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಈಗಾಗಲೇ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಬಹುತೇಕ ಸ್ಕ್ರಿಪ್ಟ್ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸಿನೆಮಾದ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದೆ. ಅಷ್ಟೇ ಅಲ್ಲ, ಚಿತ್ರದ ಹಾಡುಗಳ ಧ್ವನಿಮುದ್ರಣ ಕೆಲಸ ಸಹ ಪ್ರಾರಂಭವಾಗಿದೆ.
ಈ ಚಿತ್ರದ ಕುರಿತು ಮಾತನಾಡಿರುವ ರಾಗಿಣಿ ದ್ವಿವೇದಿ, ʼಇಲ್ಲಿಯವರೆಗೆ ನಾನು ಮಾಡಿರುವ ಪಾತ್ರಗಳಿಗಿಂತ ಸಂಪೂರ್ಣ ವಿಭಿನ್ನವಾದ ಕಥೆ ಮತ್ತು ಪಾತ್ರ ಈ ಸಿನಿಮಾದಲ್ಲಿದೆ. ಇಡೀ ಚಿತ್ರದ ಕಥೆ ನನ್ನ ಪಾತ್ರದ ಸುತ್ತ ನಡೆಯುತ್ತದೆ. ಇಂದಿನ ಸಮಾಜದಲ್ಲಿ ಆಹಾರ ವಿತರಣೆಯಲ್ಲೂ ಏನೆಲ್ಲಾ ನಡೆಯುತ್ತದೆ ಎಂಬುದನ್ನು ಈ ಸಿನೆಮಾದಲ್ಲಿ ಹೇಳಲಾಗುತ್ತಿದೆ. ನಮಗೆ ಗೊತ್ತಿಲ್ಲದ ಶಾಕಿಂಗ್ ಎನಿಸುವಂಥ ಅನೇಕ ವಿಷಯಗಳು ಈ ಸಿನೆಮಾದಲ್ಲಿದೆ. ನನಗೂ ಕೂಡ ಈ ಸಿನಿಮಾದ ಕಥೆ ಮತ್ತು ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ನನ್ನ ವೃತ್ತಿಜೀವನದಲ್ಲಿ ನಿಜವಾಗಿಯೂ ಇದೊಂದು ವಿಭಿನ್ನ ಚಿತ್ರವಾಗಲಿದೆ ಎಂಬ ನಂಬಿಕೆಯಿದೆʼ ಎಂದರು.
ಇತ್ತೀಚೆಗಷ್ಟೇ ʼತಾಯವ್ವʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಸಾತ್ವಿಕ್ ಪವನ ಕುಮಾರ್ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಸಾತ್ವಿಕ್ ಪವನ ಕುಮಾರ್, ʼಇದೊಂದು ನೈಜ ವಿಷಯವನ್ನು ಆಧರಿಸಿದ ಚಿತ್ರ. ನಮ್ಮ ನಡುವೆ ಇರುವ ಸರ್ಕಾರಿ ನ್ಯಾಯಬೆಲೆ ಅಂಗಡಿಗಳಲ್ಲಿ ನಡೆಯುವ ನೈಜ ವಿಷಯಗಳೇ ಈ ಚಿತ್ರದ ಕಥಾವಸ್ತು. ಇದನ್ನು ಒಂದಷ್ಟು ಕುತೂಹಲಭರಿತವಾಗಿ ಈ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ. ರಾಗಿಣಿ ದ್ವಿವೇದಿ ಅವರಿಗೆ ಇಲ್ಲೊಂದು ಹೊಸ ತರಹದ ಪಾತ್ರವಿದೆ. ಸರ್ಕಾರಿ ನ್ಯಾಯಬೆಲೆ ಅಂಗಡಿಯನ್ನು ನಡೆಸುವ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಅವರಿಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆʼ ಎಂದರು.
ಜಯಶಂಕರ ಟಾಕೀಸ್ ಬ್ಯಾನರಿನಲ್ಲಿ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರವನ್ನು ತೇಜು ಮೂರ್ತಿ ಮತ್ತು ಎಸ್. ಪದ್ಮಾವತಿ ಚಂದ್ರಶೇಖರ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಹಿರಿಯ ನಿರ್ದೇಶಕ ಬಿ. ರಾಮಮೂರ್ತಿ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದ ಮೂರು ಹಾಡುಗಳಿಗೆ ಅನಂತ್ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ.
ಇದೇ ಮಾರ್ಚ್ ತಿಂಗಳಿನಲ್ಲಿ ʼಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಚಿತ್ರದ ಬಹುತೇಕ ಚಿತ್ರೀಕರಣ ನಡೆಯಲಿದೆ.