ವಿಷ್ಣು ಸ್ಮಾರಕ ಜಾಗ ವಿವಾದ: ಅರ್ಜಿ ವಜಾ ಮಾಡಿದ ಹೈಕೋರ್ಟ್‌

ದಿವಂಗತ ನಟ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.;

Update: 2024-06-06 13:38 GMT
ನಟ ವಿಷ್ಣವರ್ಧನ್‌
Click the Play button to listen to article

ಚಿತ್ರನಟರ ಸಮಾಧಿ ನಿರ್ಮಾಣಕ್ಕೆ ಜಾಗ ಮಂಜೂರು ಮಾಡುವಂತೆ ಕೋರುವುದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ದಿವಂಗತ ನಟ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಅವರ ಸ್ಮಾರಕ ನಿರ್ಮಾಣ ಮಾಡಲು 10 ಗುಂಟೆ ಜಾಗ ಮಂಜೂರು ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

ವಿ.ಎಸ್.ಎಸ್.ಅಭಿಮಾನ್ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಷ್ಣುವರ್ಧನ್‌ ಅವರು ಕನ್ನಡ ಚಿತ್ರರಂಗದ ಮೇರುನಟ. ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರನ್ನು ಆರಾಧಿಸುವವರು ಅನೇಕ ಮಂದಿ ಇದ್ದಾರೆ. ಹೀಗಾಗಿ ನಟ ಹುಟ್ಟಿದ ಹಾಗೂ ದೈವಾಧೀನರಾದ ದಿನದಂದು ಅವರಿಗೆ ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸುವುದು ನಮ್ಮ ಅಭಿಲಾಷೆ. ಇದನ್ನು ಪರಿಗಣಿಸಿ ಅವರ ಅಂತ್ಯಕ್ರಿಯೆ ನಡೆದ ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ ಮೈಲಸಂದ್ರ ಗ್ರಾಮದ ಸ.ನಂ 26ರ ಅಭಿಮಾನಿ​ ಸ್ಟುಡಿಯೋದ10 ಗುಂಟೆ ಜಾಗವನ್ನು ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲು ಮಂಜೂರು ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ನ್ಯಾಯಪೀಠವನ್ನು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ರೀತಿ ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸುವಂತೆ ಕೋರಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸುವುದು ಸೂಕ್ತವಲ್ಲ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ. ಬೇಕಿದ್ದಲ್ಲಿ ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದ ಮೂಲಕ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ ಎಂದು ಹೇಳಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ವಿಷ್ಣ ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ಕೇಳಿತ್ತು. ಅದರಂತೆ ಮೈಸೂರಿನ ಎಚ್.ಡಿ. ಕೋಟೆ ರಸ್ತೆಯ ಹಾಲಾಳು ಸಮೀಪ ಸರ್ಕಾರ ಜಾಗ ನೀಡಿತ್ತು. 11 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ನಿರ್ಮಿಸಿ ಕಳೆದ ವರ್ಷ ಉದ್ಘಾಟನೆ ಮಾಡಲಾಗಿತ್ತು. ಎರಡು ಮುಕ್ಕಾಲು ಎಕರೆ ಜಾಗದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ. ವಿಷ್ಣುವರ್ಧನ್‌ ಅವರಿಗೆ ಸಂಬಂಧಿಸಿದ ಫೋಟೊ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ ಹೀಗೆ ಹತ್ತು ಹಲವು ವಿಶೇಷಗಳು ಈ ಸ್ಮಾರಕದಲ್ಲಿದೆ.

ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಆಗಿದ್ದರೂ ಅಭಿಮಾನಿಗಳು ಅಭಿಮಾನಿ ಸ್ಟುಡಿಯೋದಲ್ಲಿ ಆಗಬೇಕು ಎನ್ನುತ್ತಿದ್ದಾರೆ. ಪ್ರತಿವರ್ಷ ವಿಷ್ಣು ಹುಟ್ಟುಹಬ್ಬ, ಪುಣ್ಯಸ್ಮರಣೆ ದಿನ ಅಭಿಮಾನಿ ಸ್ಟುಡಿಯೋದಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸುತ್ತಾರೆ.

Tags:    

Similar News