ವಕ್ಫ್‌ ಬೋರ್ಡ್‌ ಪ್ರಕರಣ | ಕೇಂದ್ರ ಜಂಟಿ ಸಂಸದೀಯ ಸಮಿತಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ

Update: 2024-10-30 09:19 GMT

ವಕ್ಫ್ ಮಂಡಳಿಯ ಹೆಸರಿಗೆ ರೈತರ ಸಾಗುವಳಿ ಭೂಮಿಯನ್ನು ಇಂಡೀಕರಿಸುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ವರದಿಯಾಗುತ್ತಿವೆ. ರಾಜ್ಯ ರಾಜಕಾರಣದಲ್ಲಿ ಈ ವಿಷಯ ದೊಡ್ಡ ಬಿರುಗಾಳಿ ಎಬ್ಬಿಸುವ ಸಾಧ್ಯತೆಗಳು ಕಾಣಿಸುತ್ತಿವೆ.

ಈಗಾಗಲೇ ಪ್ರತಿಪಕ್ಷ ಬಿಜೆಪಿ ಈ ಕುರಿತು ಹೋರಾಟ ಆರಂಭಿಸಿದ್ದು, ಅತಿ ಹೆಚ್ಚು ಪ್ರಕರಣಗಳು ವರದಿಯಾಗಿರುವ ವಿಜಯಪುರ ಸೇರಿದಂತೆ ರಾಜ್ಯದ ವಕ್ಫ್ ಇಂಡೀಕರಣ ಪ್ರಕರಣಗಳ ಕುರಿತು ಅಧ್ಯಯನ ನಡೆಸಲು ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡವನ್ನು ರಚಿಸಿದೆ.

ಈ ನಡುವೆ ಮತ್ತೊಂದು ಬೆಳವಣಿಗೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರದ ಗಮನಕ್ಕೂ ಈ ವಿಷಯವನ್ನು ತಂದಿದ್ದು, ಕೇಂದ್ರ ವಕ್ಫ್ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದಾರೆ.

ಸಮಿತಿಯ ಮುಂದೆ ಸಾಕ್ಷಿಗಳಾಗಿ, ವಕ್ಫ್ ಬೋರ್ಡ್ಗೆ ತಮ್ಮ ಆಸ್ತಿ ಇಂಡೀಕರಣಗೊಂಡಿರುವ ಮತ್ತು ಆ ಸಂಬಂಧ ನೋಟಿಸ್ ಪಡೆದಿರುವ ಕರ್ನಾಟಕದ ರೈತರನ್ನು ಆಹ್ವಾನಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ತಾವು ಬರೆದಿರುವ ಪತ್ರ ಮತ್ತು ಅದಕ್ಕೆ ಸಂಬಂಧಿಸಿದ ವಿವರನ್ನು ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ʼಎಕ್ಸ್ʼನಲ್ಲಿ ಹಂಚಿಕೊಂಡಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಜಿ ಅವರಿಗೆ ಪತ್ರ ಬರೆದು, ವಿಜಯಪುರ ಜಿಲ್ಲೆ ಮತ್ತು ಕರ್ನಾಟಕದ ಸುತ್ತಮುತ್ತಲಿನ ಇತರ ಪ್ರದೇಶಗಳ ರೈತರಿಗೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ನೋಟಿಸ್ ನೀಡಿರುವುದರ ಬಗ್ಗೆ ಗಮನ ಸೆಳೆಯಲಾಗಿದೆ ಎಂದು ಎಕ್ಸ್ ಸಂದೇಶದಲ್ಲಿ ತೇಜಸ್ವಿ ಸೂರ್ಯ ಉಲ್ಲೇಖಿಸಿದ್ದಾರೆ.



ಸಂಸದರ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?

ರೈತರಿಗೆ ನೋಟಿಸ್ಗಳನ್ನು ನೀಡಿದ್ದರ ಹೊರತಾಗಿ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಕೆಲವು ರೈತರ ಜಮೀನುಗಳ ಆರ್ಟಿಸಿ, ಪಹಣಿ ಮತ್ತು ಮ್ಯುಟೇಶನ್ ರಿಜಿಸ್ಟರ್ಗಳಲ್ಲಿ ಹಕ್ಕು ಬದಲಾವಣೆಗಳನ್ನು ಮಾಡಲಾಗಿದೆ. ಸಮಿತಿಯ ಮುಂದೆ ಸಾಕ್ಷಿಗಳಾಗಿ ಈ ರೈತರ ನಿಯೋಗವನ್ನು ಆಹ್ವಾನಿಸಲು ಮತ್ತು ಈ ಸಮಸ್ಯೆಯನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಮನವಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕ ವಿಚಾರಣೆಗಾಗಿ ಈ ಹಕ್ಕು ಬದಲಾವಣೆ ಮಾಡಿರುವ ಪ್ರದೇಶಗಳಿಗೆ ಜಂಟಿ ಸಂಸದೀಯ ಸಮಿತಿ ಭೇಟಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Tags:    

Similar News