ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಮಹತ್ವದ ತೀರ್ಮಾನ ತೆಗೆದುಕೊಂಡ ಪ್ರಿಯಾಂಕ್ ಖರ್ಗೆ
ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಬಿಜೆಪಿ ಆರೋಪದ ಹಿನ್ನೆಲೆಯಲ್ಲಿ ಖರ್ಗೆ ತೀರ್ಮಾನ ಮಹತ್ವ ಪಡೆದಿದೆ.
ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.
ಸಚಿನ್ ಆತ್ಮಹತ್ಯೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣ ಎಂದು ರಾಜ್ಯ ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಜೊತೆಗೆ ಪ್ರಿಯಾಂಕ್ ಖರ್ಗೆ ರಾಜೀನಾಮೆಯನ್ನು ಪಡೆದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ರಾಜು ಕಪನೂರ್ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇರುವ ಫೋಟೋಗಳನ್ನು ವಿಜಯೇಂದ್ರ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ ರಾಜೀನಾಮೆಯನ್ನು ಪಡೆದುಕೊಂಡು, ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಹತ್ವದ ತೀರ್ಮಾನವನ್ನು ತೆಗದುಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ಗೆ ಪತ್ರ ಬರೆದಿದ್ದಾರೆ.
ಸಂಶಯ ಬರುವಂತಹ ವಿಚಾರಗಳಿವೆ: ಪ್ರಿಯಾಂಕ್
ಗುತ್ತಿಗೆದಾರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ತಮ್ಮ ಮೇಲೆ ಬಂದಿರುವ ಆರೋಪಗಳಿಗೆ ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿರುವ ಪ್ರಿಯಾಂಕ್ ಖರ್ಗೆ, ತನಿಖೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ. ಪರಮಶ್ವರ್ಗೆ ಪತ್ರ ಬರೆದಿದ್ದಾರೆ. ಡಿ. 27 ರಂದು ಬರೆದಿರುವ ಪತ್ರದಲ್ಲಿ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದುರಾದೃಷ್ಟ ಹಾಗೂ ಖೇದಕರ ಸಂಗತಿಯಾಗಿದೆ. ಆದರೆ ಪ್ರಕರಣದಲ್ಲಿ ಸಂಶಯ ಮೂಡಿಸುವಂತಹ ಹಲವು ವಿಷಯಗಳು ನಡೆಯುತ್ತಿವೆ. ಈ ಕುರಿತು ಸಾರ್ವಜನಿಕ ವಲಯದಲ್ಲಿಯೂ ಚರ್ಚೆಯಾಗುತ್ತಿದೆ. ಹೀಗಾಗಿ ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯಾಗಿರುವ ಸಿಐಡಿಗೆ ವಹಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಡಿ.29ರಂದು ಸಂಜೆ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಪ್ರಿಯಾಂಕ್ ಖರ್ಗೆ ಮನವಿ ಸಲ್ಲಿಸಿದ್ದರು.
ಆದರೆ, ಪ್ರಿಯಾಂಕ್ ಖರ್ಗೆ ಸ್ಪಷ್ಟನೆಯನ್ನು ತಳ್ಳಿ ಹಾಕಿರುವ ಬಿಜೆಪಿ ನಾಯಕರು ರಾಜೀನಾಮೆ ಹಾಗೂ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.
ಪ್ರಕರಣ ಮುಚ್ಚಿಹಾಕಲು ಸಿಐಡಿಗೆ?
ಗುತ್ತಿಗೆದಾರ ಸಚಿನ್ ಕೊಲೆ ಕೇಸನ್ನು ಮುಚ್ಚಿಹಾಕಲು ತನಿಖೆಯನ್ನು ಸಿಐಡಿಗೆ ವಹಿಸುವಂತೆ ಪ್ರಿಯಾಂಕ್ ಖರ್ಗೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರದ್ದು ಸುಪಾರಿ & ಕೋ ಸಂಸ್ಥೆಯಾಗಿದೆ ಎಂದು ತನ್ನ ಎಕ್ಸ್ ಖಾತೆಯಲ್ಲಿ ಬಿಜೆಪಿ ಆರೋಪಿಸಿದೆ. ರಾಜೀನಾಮೆಗೆ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈಶ್ವರಪ್ಪ ರಾಜೀನಾಮೆ ಕೊಟ್ಟಿದ್ದರು: ಬಿ.ವೈ. ವಿಜಯೇಂದ್ರ
ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾಗ, ಇದೇ ಸಿದ್ದರಾಮಯ್ಯ ಆಗ ಮುಖ್ಯಮಂತ್ರಿ ಆಗಿದ್ದಾಗ ಆ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರು ಕೂಡ ರಾಜೀನಾಮೆ ಕೊಟ್ಟು, ಸಿಬಿಐ ತನಿಖೆ ಆಗಿ ಕ್ಲೀನ್ ಚಿಟ್ ಬಂದಿತ್ತು ಎಂದು ಹೇಳಿರುವ ವಿಜಯೇಂದ್ರ, ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.
ಜೊತೆಗೆ ಸಚಿನ್ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕೊಡಬೇಕು. ಕುಟುಂಬಕ್ಕೆ 1 ಕೋಟಿ ರೂಪಾಯಿಗಳ ಪರಿಹಾರ ನೀಡಬೇಕು. ಅವರಲ್ಲಿ ಹಲವರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರಕಾರಿ ನೌಕರಿ ಕೊಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.