ಅತ್ಯಾಚಾರ ಪ್ರಕರಣ |ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು

ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌ ಜಗದೀಶ್‌ ಅವರು ವಾದ ಮಂಡಿಸಿದರೆ, ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲೆ ನಳಿನಿ ಮಾಯಗೌಡ ವಾದ ಮಂಡಿಸಿದರು.;

Update: 2025-08-02 10:48 GMT

ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ಪ್ರಕಟವಾಗಿದೆ. 

ಮೈಸೂರಿನ ಕೆ.ಆರ್.​ನಗರದ ಮಹಿಳೆ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿದೆ.   

ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376(2)(k) (ಮಹಿಳೆಯ ಮೇಲೆ ನಿಯಂತ್ರಣ ಅಥವಾ ಪ್ರಾಬಲ್ಯದ ಸ್ಥಾನದಲ್ಲಿದ್ದು ಅತ್ಯಾಚಾರ ಎಸಗುವುದು) ಮತ್ತು ಸೆಕ್ಷನ್ 376(2)(n) (ಒಬ್ಬನೇ ವ್ಯಕ್ತಿ ಅದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು) ಅಡಿಯಲ್ಲಿನ ಆರೋಪಗಳು ಸಾಬೀತಾಗಿವೆ. ಈ ಕಾರಣದಿಂದಾಗಿ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.

ನ್ಯಾಯಾಲಯದ ತೀರ್ಪಿನ ಪ್ರಕಾರ, ಜೀವಾವಧಿ ಶಿಕ್ಷೆ ಮತ್ತು ದಂಡದ ಜೊತೆಗೆ ಸಂತ್ರಸ್ತೆಗೆ ಏಳು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌  ಅವರು ಶುಕ್ರವಾರ ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ತೀರ್ಪು ಪ್ರಕಟಿಸಿ, ಶಿಕ್ಷೆಯ ಪ್ರಮಾಣವನ್ನು ಶನಿವಾರಕ್ಕೆ ಕಾಯ್ದಿರಿಸಿತ್ತು. ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌ ಜಗದೀಶ್‌ ಅವರು ವಾದ ಮಂಡಿಸಿದರೆ, ಪ್ರಜ್ವಲ್‌ ರೇವಣ್ಣ ಪರವಾಗಿ ಹಿರಿಯ ವಕೀಲೆ ನಳಿನಿ ಮಾಯಗೌಡ ವಾದ ಮಂಡಿಸಿದರು.

ಹೇಗಿತ್ತು ವಾದ- ಪ್ರತಿವಾದ 

ಜೀವಕ್ಕಿಂತ ಹೆಚ್ಚಿನ ಹಾನಿ ಸಂತ್ರಸ್ತ ಮಹಿಳೆಗಾಗಿದೆ. ಒಪ್ಪಿಗೆಯಿಲ್ಲದೇ ಲೈಂಗಿಕ ಕ್ರಿಯೆಯ ಚಿತ್ರೀಕರಣ ಮಾಡಲಾಗಿದೆ. ಆಕೆಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಲಾಗಿದೆ. ಅತ್ಯಾಚಾರದ ರೀತಿ ಆರೋಪಿಯ ವಕ್ರ ಮನಃಸ್ಥಿತಿ ತೋರಿಸುತ್ತದೆ. ಪ್ರಜ್ವಲ್ ಸಂಸದನಾಗಿದ್ದೂ ಇಂತಹ ದುಷ್ಕೃತ್ಯ ಎಸಗಿದ್ದಾನೆ. ಕಾನೂನು ತಿಳಿದಿದ್ದೂ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಇದು ಗಂಭೀರ ಅಪರಾಧ. ಈತನ ಮೇಲೆ ಈ ರೀತಿಯ ಇನ್ನಷ್ಟು ಕೇಸ್​ಗಳಿವೆ. ಬಹಳಷ್ಟು ಜನರ ಅಶ್ಲೀಲ ವಿಡಿಯೊ ಮಾಡಿದ್ದಾನೆ. ವಿಡಿಯೊ ಚಿತ್ರೀಕರಿಸಿರುವುದು ಗಂಭೀರ ಅಪರಾಧ. ಗರಿಷ್ಠ ಶಿಕ್ಷೆ ವಿಧಿಸಿ, ಇತರರಿಗೆ ಎಚ್ಚರಿಕೆಯಾಗುವಂತೆ ನೋಡಿಕೊಳ್ಳಬೇಕು. ಜೀವನಪರ್ಯಂತ ಸೆರೆವಾಸದ ಶಿಕ್ಷೆ ವಿಧಿಸಬೇಕು ಎಂದು ಬಿ.ಎನ್‌.ಜಗದೀಶ್‌ ವಾದ ಮಂಡಿಸಿದರು.

ಸಾಕ್ಷ್ಯಾಧಾರ ನಾಶಪಡಿಸಲು ಯತ್ನಿಸಿರುವುದೂ ಗಂಭೀರ ಅಪರಾಧ. ಈತ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟಿಲ್ಲ. ಈತನಿಗೆ ಕಠಿಣ ಶಿಕ್ಷೆ ಒದಗಿಸಿ ಸಮಾಜಕ್ಕೆ ಸಂದೇಶ ನೀಡಬೇಕು. ಹಣ, ಅಧಿಕಾರವಿರುವ ಇವರಿಗೆ ಕಡಿಮೆ ಶಿಕ್ಷೆಯಾಗಬಾರದು ಎಂದು ವಾದಿಸಿದರು.

ಪ್ರಜ್ವಲ್‌ ರೇವಣ್ಣ ಪರ ವಾದ ಮಂಡಿಸಿದ ನಳಿನಿ ಮಾಯೇಗೌಡ, ಎಸ್​​​ಪಿಪಿಗಳು ಸಮಾಜಕ್ಕೆ ಸಂದೇಶ ನೀಡಬೇಕೆಂದು ವಾದ ಮಂಡಿಸಿದ್ದಾರೆ. ಯುವ ಸಂಸದನಾಗಿ ಪ್ರಜ್ವಲ್ ಜನಸೇವೆ ಮಾಡಿದ್ದಾರೆ. ಹಣ ಮಾಡಲೆಂದು ಆತ ರಾಜಕಾರಣಕ್ಕೆ ಸೇರಿಲ್ಲ. 2024 ರ ಚುನಾವಣೆ ವೇಳೆಯೇ ವಿಡಿಯೊಗಳನ್ನು ಏಕೆ ವೈರಲ್ ಮಾಡಲಾಯಿತು?, ಇದು ಪ್ರಜ್ವಲ್ ವಿರುದ್ಧ ರಾಜಕೀಯ ಪ್ರೇರಿತ ಕ್ರಮವಾಗಿದೆ. ಆರೋಪಿಯ ರಾಜಕೀಯ ಸ್ಥಾನಮಾನ ಶಿಕ್ಷೆಗೆ ಕಾರಣವಾಗಬಾರದು. ಹಾಗೆ ಮಾಡಿದರೆ, ಇಷ್ಟು ದಿನದ ಒಳ್ಳೆ ಹೆಸರು ಏನಾಗಬೇಕು ಎಂದು ಪ್ರಶ್ನಿಸಿದರು.

ಪ್ರಜ್ವಲ್ ವಯಸ್ಸು ಕೇವಲ 34 ವರ್ಷ. ಸಂತ್ರಸ್ತೆ ಸಮಾಜದಿಂದ ತಿರಸ್ಕೃತಗೊಂಡಿಲ್ಲ. ಆಕೆ ತನ್ನ ಸಂಸಾರದೊಂದಿಗೆ ಎಂದಿನಂತೆಯೇ ಜೀವನ ಸಾಗಿಸುತ್ತಿದ್ದಾರೆ. ಆಕೆಗೆ ವಿವಾಹವಾಗಿ ಮಕ್ಕಳಾಗಿವೆ. ಜೀವನ‌ ನಡೆಯುತ್ತಿದೆ ಎಂದು ನಳಿನಿ ಮಾಯೇಗೌಡ ವಾದ ಮಂಡಿಸಿದರು.

ಪ್ರಜ್ವಲ್ ಭವಿಷ್ಯವನ್ನೂ ನ್ಯಾಯಾಲಯ ಗಮನಿಸಬೇಕು. ಈಗಾಗಲೇ ಮಾಧ್ಯಮಗಳಲ್ಲಿ ಆತನ ತೇಜೋವಧೆಯಾಗಿದೆ. ಬಂಧನವಾದ ದಿನದಿಂದಲೂ ಜೈಲಿನಲ್ಲಿದ್ದಾನೆ. ಆತನಿಗೆ ವಯಸ್ಸಾದ ತಂದೆ-ತಾಯಿ ಇದ್ದಾರೆ. ತಾತ ಮಾಜಿ ಪ್ರಧಾನಿ. ಆತನ ರಾಜಕೀಯ ಸ್ಥಾನಮಾನವಷ್ಟೇ ಶಿಕ್ಷೆಗೆ ಕಾರಣವಾಗಬಾರದು. ಚುನಾವಣೆ ಗೆಲ್ಲುವ ವೇಳೆಯೇ ಇಂತಹ ವಿಡಿಯೋ ಹರಿಬಿಡಲಾಗಿದೆ ಎಂಬುದನ್ನೂ ಗಮನಿಸಬೇಕು. ಸಂತ್ರಸ್ತೆಯಂತೆ ಅಪರಾಧಿಗೂ ಹೆಚ್ಚಿನ ಹಾನಿಯಾಗಿದೆ ಎಂದು ನಳಿನಿ ಮಾಯೇಗೌಡ ವಾದಿಸಿದರು. 

ಪ್ರಜ್ವಲ್ ರೇವಣ್ಣ ಹೇಳಿದ್ದೇನು?

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಪ್ರಜ್ವಲ್ ರೇವಣ್ಣ, ‘‘ನಾನು ಸಂಸದನಾಗಿದ್ದ ವೇಳೆ ಯಾರೂ ಇಂತಹ ಆರೋಪ‌ ಮಾಡಿರಲಿಲ್ಲ. ನಾನು ಅತ್ಯಾಚಾರ ಮಾಡಿದ್ದರೆ ಅಂದೇ ಏಕೆ ಹೇಳಲಿಲ್ಲ?, ಚುನಾವಣೆ ಸಮಯದಲ್ಲಿಯೇ ಯಾಕೆ ಹಾಗೆ ಮಾಡಿದರು ಎಂದು ಪ್ರಶ್ನಿಸಿದ ಅವರು, ನ್ಯಾಯಾಲಯ ಏನೇ ತೀರ್ಮಾನ ಕೊಟ್ಟರೂ ಅದನ್ನು ಒಪ್ಪಿಕೊಳ್ಳುತ್ತೇನೆ’’ ಎಂದರು. 

ಏನಿದು ಪ್ರಕರಣ?

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರ ಹಲವು ಅಶ್ಲೀಲ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ವಿದೇಶಕ್ಕೆ ಪಲಾಯನ ಮಾಡಿದ್ದರು.

ಮೇ 31, 2024ರಂದು ವಾಪಸ್‌ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ನನ್ನು ಬಂಧಿಸಿದ್ದರು. ಪ್ರಕರಣದ ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಮೊಬೈಲ್ ಫೋನ್‌ಗಳಿಂದ ಹಲವು ವಿಡಿಯೊಗಳನ್ನು ರಿಕವರಿ ಮಾಡಲಾಗಿತ್ತು. ಈ ಸಾಕ್ಷ್ಯಗಳ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದರು.

ಮನೆಕೆಲಸದಾಕೆಯಿಂದ ದೂರು ದಾಖಲು

ಮೈಸೂರಿನ ಕೆ.ಆರ್. ನಗರದ ನಿವಾಸಿಯಾದ ಮಹಿಳೆಯೊಬ್ಬರು ಪ್ರಜ್ವಲ್ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಆಕೆಯ ಮೇಲೂ ಅತ್ಯಾಚಾರ ನಡೆಸಿದ ಸಂಬಂಧ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಈ ದೂರಿನಲ್ಲಿ ಪ್ರಜ್ವಲ್ ರೇವಣ್ಣ ತಮ್ಮ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ಪ್ರಕರಣವನ್ನು ಎಸ್‌ಐಟಿ ತನಿಖೆ ಮಾಡಿತ್ತು.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಹೊರಬೀಳುತ್ತಿದ್ದಂತೆ ಪ್ರಕರಣದ ಸಂತ್ರಸ್ತ ಮಹಿಳೆ ಸಾಕ್ಷಿ ಹೇಳದಂತೆ ಮಾಡಲು ಆಕೆಯನ್ನು ಅಪಹರಿಸಿ ಮಹಿಳೆಯನ್ನು ಕೆ.ಆರ್. ನಗರದ ಒಂದು ಫಾರ್ಮ್‌ಹೌಸ್‌ನಲ್ಲಿ ಕೂಡಿ ಹಾಕಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ವಲ್ ತಂದೆ ಹೆಚ್.ಡಿ.ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಮೇಲೂ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಪ್ರಜ್ವಲ್ ತಂದೆ ಹೆಚ್.ಡಿ. ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ಅವರನ್ನೂ ಬಂಧಿಸಲಾಗಿತ್ತು. ಬಳಿಕ ಅವರಿಬ್ಬರೂ ಜಾಮೀನಿನ ಮೇಲೆ ಹೊರಬಂದಿದ್ದರು.  

ಪ್ರಕರಣಗಳ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ 1,652 ಪುಟಗಳ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದರಲ್ಲಿ 113 ಸಾಕ್ಷಿಗಳ ಹೇಳಿಕೆಗಳು ಮತ್ತು ಹಲವು ವಿಧಿವಿಜ್ಞಾನ ಸಾಕ್ಷ್ಯಗಳಿದ್ದವು.   

ನ್ಯಾಯಾಲಯದ ಮಹತ್ವದ ತೀರ್ಪು

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತ್ವರಿತಗತಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿತು. ನ್ಯಾಯಾಲಯದ ಮುಂದಿಟ್ಟ 26 ಸಾಕ್ಷಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ನ್ಯಾಯಾಧೀಶರು ಸೂಕ್ಷ್ಮವಾಗಿ ಪರಿಶೀಲಿಸಿದ್ದರು. ಈ ಎಲ್ಲಾ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ನ್ಯಾಯಾಲಯವು ಪ್ರಜ್ವಲ್ ರೇವಣ್ಣನನ್ನು ದೋಷಿ ಎಂಬ ಮಹತ್ವದ ತೀರ್ಪು ನೀಡಿತ್ತು. ಶುಕ್ರವಾರ ನ್ಯಾಯಾಲಯ ತೀರ್ಪು ಪ್ರಕಟಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದರು. 

Tags:    

Similar News