PUC Exam | ಪಿಯು ಪರೀಕ್ಷೆಗೆ ಮೊದಲ ದಿನ 17,184 ವಿದ್ಯಾರ್ಥಿಗಳು ಗೈರು
ಪ್ರಥಮ ಭಾಷೆ ಪರೀಕ್ಷೆಗೆ ರಾಜ್ಯಾದ್ಯಂತ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 5,28,600 ಮಂದಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,11,416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.;
ದ್ವಿತೀಯ ಪಿಯು ಮೊದಲ ದಿನದ ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 17,184 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಶನಿವಾರ (ಮಾ.1) ನಡೆದ ಪ್ರಥಮ ಭಾಷೆ ಪರೀಕ್ಷೆಯು ಯಾವುದೇ ಅಕ್ರಮಗಳಿಗೆ ಆಸ್ಪದ ಇಲ್ಲದಂತೆ ಸುಸೂತ್ರವಾಗಿ ನೆರವೇರಿದೆ.
ಪ್ರಥಮ ಭಾಷೆ ಪರೀಕ್ಷೆಗೆ ರಾಜ್ಯಾದ್ಯಂತ ಹೊಸ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ ಒಟ್ಟು 5,28,600 ಮಂದಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,11,416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ರಾಜ್ಯದ ಯಾವ ಜಿಲ್ಲೆಗಳಲ್ಲೂ ನಕಲು, ಇನ್ನಿತರ ಅಕ್ರಮಗಳು ನಡೆದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ ಅವರು ʼದ ಫೆಡರಲ್ ಕರ್ನಾಟಕʼಕ್ಕೆ ತಿಳಿಸಿದರು.
ಮಾ.1 ರಿಂದ ಆರಂಭವಾಗಿರುವ ಪಿಯು ಪರೀಕ್ಷೆ ಮಾ.20ರವರೆಗೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ 7,13,862 ಮಂದಿ ನೋಂದಾಯಿಸಿಕೊಂಡಿದ್ದು, ಇವರ ಪೈಕಿ 6,61,474 ಹೊಸ ವಿದ್ಯಾರ್ಥಿಗಳಿದ್ದಾರೆ. 34,071 ಮಂದಿ ಪುನರಾವರ್ತಿತ ಮತ್ತು 18,317 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆಗೆ ನೋಂದಾಯಿಸಿಕೊಂಡವರಲ್ಲಿ ಬಾಲಕರು 3,35,468 ಮತ್ತು 3,78,389 ಬಾಲಕಿಯರು ಇದ್ದಾರೆ. ಐವರು ತೃತೀಯ ಲಿಂಗಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 2,91,959 ವಿದ್ಯಾರ್ಥಿಗಳ, ವಾಣಿಜ್ಯ ವಿಭಾಗದಲ್ಲಿ 2,29,308 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ 1,92,595 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1,171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಇದೇ ಮೊದಲ ಬಾರಿಗೆ ಪಿಯು ವಾರ್ಷಿಕ ಪರೀಕ್ಷೆಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು.
ಪರೀಕ್ಷಾರ್ಥಿಗಳಿಗೆ ಉಚಿತ ಪ್ರಯಾಣ ಅವಕಾಶ
ಮಾ.1ರಿಂದ ಆರಂಭವಾಗಿರುವ ದ್ವಿತೀಯ ಪಿಯು ಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳು ಹಾಗೂ ಮಾ.21ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಎರಡೂ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಾರಿಗೆ ಬಸ್‌ಗಳಲ್ಲಿ ಉಚಿತ ಅವಕಾಶ ಮಾಡಿಕೊಡಲಾಗಿದೆ.