2ಎ ಮೀಸಲಾತಿ | ಡಿ.10 ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ: ಜಯ ಮೃತ್ಯುಂಜಯ ಸ್ವಾಮೀಜಿ
ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ.;
ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಡಿಸೆಂಬರ್ 10ರಂದು ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿರುವ ಬೆಳಗಾವಿಯ ಸುವರ್ಣಸೌಧದಕ್ಕೆ ಮುತ್ತಿಗೆ ಹಾಕಲಾಗುವುದು ನಡೆಸಲಾಗುವುದು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.10ರಂದು ಸುವರ್ಣಸೌಧದ ಮುಂದೆ 5 ಸಾವಿರ ಟ್ರ್ಯಾಕ್ಟರ್‌ಗಳು ಹಾಗೂ ಲಕ್ಷ ಲಕ್ಷ ಪಂಚಮಸಾಲಿ ಸದಸ್ಯರು ಸಮಾವೇಶಗೊಂಡು ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಿದ್ದಾರೆ. ಈ ಆಂದೋಲನವನ್ನು ತಡೆಯಲು ಅಥವಾ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದರೆ, ಯಾವುದೇ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಂಚಮಸಾಲಿ ಸಮುದಾಯಕ್ಕೆ ಬಹುಕಾಲದಿಂದ ಬಾಕಿ ಉಳಿದಿರುವ 2ಎ ಮೀಸಲಾತಿ ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಹಿಂದೆಯೂ ಕೂಡ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಇದ್ದಾಗಲೂ ಸುವರ್ಣಸೌಧದ ಮುಂದೆ ಉಪವಾಸ ಸತ್ಯಾಗ್ರಹ, ಹೋರಾಟ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಟೀಕಿಸಿದ ಸ್ವಾಮೀಜಿ, ದಲಿತ ಸಮುದಾಯಕ್ಕೆ ಮೂರು ತಿಂಗಳೊಳಗೆ ಇದೇ ರೀತಿಯ ಮೀಸಲಾತಿಯನ್ನು ತ್ವರಿತವಾಗಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಪದೇಪದೆ ಭರವಸೆ ನೀಡಿದರೂ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಘೋಷಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದ ಕಾರಣ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ತಿಳಿಸಿದರು.
ಡಿ.10ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಪೂರ್ವಭಾವಿ ಸಭೆ ಕರೆಯಲಾಗುವುದು. ಡಿ.1ರಂದು ಬೆಳಗಾವಿ ಮಹಾಂತೇಶ ಭವನದಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಜನಪ್ರತಿನಿಧಿಗಳ ಸಭೆ ಕರೆಯಲಾಗಿದೆ. ಈ ವೇಳೆ ಯಾವ ರೀತಿ ಸೌಧಕ್ಕೆ ಮುತ್ತಿಗೆ ಹಾಕಬೇಕೆಂದು ಮುಕ್ತವಾಗಿ ಚರ್ಚಿಸುತ್ತೇವೆ ಎಂದರು.