KEA Exams | 6,052 ನೇಮಕಾತಿ ಪ್ರಕ್ರಿಯೆ ಪೂರ್ಣ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನಲ್ಲಿ 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.

Update: 2024-12-31 08:09 GMT

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿದಂತೆ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ.

ಪ್ರಾಧಿಕಾರವು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆ, ಸೀಟು ಹಂಚಿಕೆ, ಪ್ರವೇಶ ಪ್ರಕ್ರಿಯೆ ಇತ್ಯಾದಿಗಳನ್ನು ನಿರ್ವಹಿಸುತ್ತಿದೆ. ಇದರ ಜೊತೆಗೆ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳನ್ನೂ ನಿಭಾಯಿಸುತ್ತಿದೆ. ಕಳೆದ ಒಂದು ವರ್ಷದಲ್ಲಿ 20 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ನಿರ್ವಹಿಸಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ 947 ಹುದ್ದೆಗಳ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯನ್ನು ಎರಡು ಹಂತದಲ್ಲಿ (ಒಮ್ಮೆ 545, ಮತ್ತೊಮ್ಮೆ 402 ಹುದ್ದೆ) ಮಾಡಲಾಯಿತು. ಬ್ಲೂ ಟೂತ್‌ ಸೇರಿದಂತೆ ಇತರ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ, ಪರೀಕ್ಷಾ ಅಕ್ರಮ ಎಸಗಲು ಪ್ರಯತ್ನಿಸುವ ಸುಳಿವು ಅರಿತು, ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಪದವಿ ಕಾಲೇಜುಗಳ ಪ್ರಾಂಶುಪಾಲರು (300 ಹುದ್ದೆ), ಎಂಎಸ್‌ಐಎಲ್‌ (72), ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186) ಮತ್ತು ಕಿಯೋನಿಕ್ಸ್‌ (26) ಸಂಸ್ಥೆಗಳ ನೇಮಕಾತಿಗೆ 2022ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಪಿಎಸ್‌ಐ (545), ಸೈನಿಕ ಕಲ್ಯಾಣ ಮತ್ತು ಪುನರ್‌ವಸತಿ ಮಂಡಳಿ (14), ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (41), ಕರ್ನಾಟಕ ವಿದ್ಯುತ್‌ ನಿಗಮ (394)- ಈ ಸಂಸ್ಥೆಗಳ ಹುದ್ದೆಗಳ ನೇಮಕ ಪ್ರಕ್ರಿಯೆಯೂ ನಡೆದಿದೆ.


Tags:    

Similar News