ಲೈಂಗಿಕ ದೌರ್ಜನ್ಯ | ಆರೋಪಿ ಡಿವೈಎಸ್ಪಿ ರಾಮಚಂದ್ರಪ್ಪ ಬಂಧನ
ಜಮೀನು ವಿವಾದ ಬಗೆಹರಿಸಿಕೊಡುವಂತೆ ಕೋರಿ ಪಾವಗಡ ತಾಲೂಕಿನ ಮಹಿಳೆಯೊಬ್ಬರು ಮಧುಗಿರಿ ಡಿವೈಎಸ್ಪಿ ಕಚೇರಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ಅಧಿಕೃತ ಕಚೇರಿಯಲ್ಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು;
ದೂರು ಕೊಡಲು ಬಂದ ಮಹಿಳೆಯ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತುಮಕೂರು ಜಿಲ್ಲೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.
ಜಮೀನು ವಿವಾದ ಬಗೆಹರಿಸಿಕೊಡುವಂತೆ ಕೋರಿ ಪಾವಗಡ ತಾಲೂಕಿನ ಮಹಿಳೆಯೊಬ್ಬರು ಡಿವೈಎಸ್ಪಿ ಕಚೇರಿಗೆ ದೂರು ನೀಡಲು ಬಂದಿದ್ದರು. ಈ ವೇಳೆ ದೂರುದಾರ ಮಹಿಳೆಯನ್ನು ಪುಸಲಾಯಿಸಿ ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದರು. ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಡಿವೈಎಸ್ಪಿ ರಾಮಚಂದ್ರಪ್ಪ ನಾಪತ್ತೆಯಾಗಿದ್ದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಡಿವೈಎಸ್ಪಿಯನ್ನು ಅಮಾನತು ಮಾಡಿ ಆದೇಶಿಸಿದ್ದರು. ಇದಾದ ಬಳಿಕ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯಿಂದ ದೂರು ಪಡೆದು ಪ್ರಕರಣ ದಾಖಲಿಸಲಾಗಿತ್ತು. ಶುಕ್ರವಾರ ರಾತ್ರಿ ಆರೋಪಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಿದ ಪೊಲೀಸರು, ಮಧುಗಿರಿ ಜೆಎಂಎಫ್ ಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ಡಿವೈಎಸ್ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ದುರ್ವರ್ತನೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೇ ಅಧಿಕಾರಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು.
ಗೃಹ ಸಚಿವ ಡಾ.ಜಿ. ಪರಮೇಶ್ವರ್ ತವರು ಜಿಲ್ಲೆಯಲ್ಲೇ ದೂರು ಕೊಡಲು ಬಂದ ಮಹಿಳೆಯ ಮೇಲೆಯೇ ಪೊಲೀಸ್ ಅಧಿಕಾರಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಇಲಾಖೆಯನ್ನು ತಲೆ ತಗ್ಗಿಸುವಂತೆ ಮಾಡಿತ್ತು. ಮಹಿಳೆಯರು, ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ ಭಕ್ಷಕರಂತೆ ನಡೆದುಕೊಂಡಿರುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಟೀಕೆ ಮಾಡಿದ್ದರು.