ಆರೋಪಿಸುವವರು ಸಾಬೀತುಪಡಿಸಲಿ; ಎಚ್‌ಡಿಕೆಗೆ ಸಿಎಂ ತಿರುಗೇಟು
ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿವೆ. ನೌಕರರ ವೇತನ, ಡೀಸೆಲ್ ಬೆಲೆ ಏರಿಕೆ, ಬಸ್‌ಗಳ ಖರೀದಿ ಹಾಗೂ ಹಣದುಬ್ಬವೂ ಹೆಚ್ಚಾಗಿದೆ. ಈಗ ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.;
ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸ. ವೃಥಾ ಆರೋಪ ಮಾಡಿದರೆ ಸಾಲದು, ದಾಖ ಲೆಗಳ ಸಮೇತ ಆರೋಪ ಸಾಬೀತುಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಶೇಕಡಾ 60 ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅದನ್ನು ಸಾಬೀತುಪಡಿಸಲು ಎಂದು ಸವಾಲು ಹಾಕಿದರು.
ಕೇಂದ್ರ ಸರ್ಕಾರ ರೈಲು ದರ ಏರಿಕೆ ಮಾಡಿಲ್ಲವೇ
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿವೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್‌ಗಳ ಖರೀದಿ ಹಾಗೂ ಹಣದುಬ್ಬವೂ ಹೆಚ್ಚಾಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಿದ್ದು, ಈಗ ಸಾರಿಗೆ ನಿಗಮಗಳು ತೊಂದರೆಯಲ್ಲಿವೆ. ಜೊತೆಗೆ ದರ ಏರಿಕೆಯ ಬೇಡಿಕೆಯೂ ಇದ್ದುದ್ದರಿಂದ ಪ್ರಯಾಣ ದರ ಏರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ?, ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ವರಿಷ್ಠರ ತೀರ್ಮಾನ
ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.
ತಾ.ಪಂ.ಜಿ.ಪಂ. ಚುನಾವಣೆಗೆ ಸಿದ್ದ
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ.ಚುನಾವಣೆ ನಡೆಸುವ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಅದು ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು.
ಒಳಮೀಸಲಾತಿ ನೀಡಲು ಸರ್ಕಾರ ಬದ್ಧ
ಒಳಮೀಸಲಾತಿ ನೀಡಬೇಕೆಂದು ಸುಪ್ರೀಂಕೋರ್ಟ್ ಹೇಳಿದ್ದು, ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ರಚಿಸಲಾಗಿದೆ. ಸಮಿತಿಯು ವರದಿ ನೀಡುತ್ತಿದ್ದಂತೆ ಒಳಮೀಸಲಾತಿ ಜಾರಿ ಮಾಡಲಾಗುವುದು. ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ರಾಜಕೀಯ ಚರ್ಚೆ ನಡೆದಿಲ್ಲ
ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಾರ್ಚ್ ನಲ್ಲಿ ಬಜೆಟ್ ಮಂಡನೆ
ಈ ಬಾರಿಯ ಬಜೆಟ್ ಅನ್ನು ಮಾರ್ಚ್ ತಿಂಗಳಲ್ಲಿ ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ಅಧಿಕೃತ ದಿನಾಂಕ ತಿಳಿಸಲಾಗುವುದು ಎಂದರು.