Actor Darshan Case | ಎಫ್ಎಸ್ಎಲ್, ಸಿಐಡಿ ತಾಂತ್ರಿಕ ಘಟಕಕ್ಕೆ ಸಿಸಿಟಿವಿ ದೃಶ್ಯ

Update: 2024-07-15 13:22 GMT

Actor Darshan Case | ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮತ್ತು ಸಹವರ್ತಿಗಳು ಘಟನೆಯ ದಿನ ಸಂಚರಿಸಿರುವ ಮಾರ್ಗದ ಸಿಸಿಟಿವಿ ದೃಶ್ಯಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಸಂಗ್ರಹಿಸಿದ್ದಾರೆ. ಇದೀಗ ಆ ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಸಿಐಡಿಯ ತಾಂತ್ರಿಕ ಘಟಕಕ್ಕೆ ರವಾನಿಸಲಾಗಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು 30ಕ್ಕೂ ಅಧಿಕ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ. ಆರೋಪಿಗಳು ಪಾರ್ಟಿ ಮಾಡಿದ್ದ ಆರ್. ಆರ್ ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಿಂದ ಪಟ್ಟಣಗೆರೆ ಶೆಡ್ ಮಾರ್ಗದಲ್ಲಿರುವ‌ ಸಿಸಿಟಿವಿ ಕ್ಯಾಮೆರಾ ದೃಶ್ಯಗಳು, ಪಟ್ಟಣಗೆರೆ ಶೆಡ್​ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳು, ಮೃತದೇಹ ಸಾಗಿಸಿದ್ದಾರೆನ್ನಲಾದ ಸುಮನಹಳ್ಳಿ ರಾಜಕಾಲುವೆ ಮಾರ್ಗದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆ ಹಾಕಲಾಗಿದೆ. ಅಲ್ಲದೆ ದರ್ಶನ್, ಪವಿತ್ರಾಗೌಡ ಸೇರಿದಂತೆ ಪ್ರಮುಖ ಆರೋಪಿಗಳ ಮನೆಗಳು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಿಸಿ ಟಿವಿ ದೃಶ್ಯಾವಳಿಗಳು ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯ ಆಗಿವೆ. ಆ ದೃಶ್ಯಗಳ ಟೈಮ್ ಲೈನ್ ಹೊಂದಾಣಿಕೆ ಮತ್ತಿತರ ಕೂಲಂಕಷವಾದ ಪರಿಶೀಲನೆಗಾಗಿ ಎಫ್ಎಸ್ಎಲ್ ಹಾಗೂ ಸಿಐಡಿಯ ತಾಂತ್ರಿಕ ಘಟಕಕ್ಕೆ ರವಾನಿಸಲಾಗಿದೆ. ಪರಿಶೀಲನೆಯ ನಂತರ ಬರುವ ಸಮಗ್ರ ವರದಿಯನ್ನು ಪಡೆದು ಆ ಬಳಿಕ ವಿವರವನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಾಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ.

ಇದರಲ್ಲಿ ದರ್ಶನ್ ಕೈವಾಡ ಇದೆ. ದರ್ಶನ್ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್‌ರನ್ನು ಬಂಧಿಸಲಾಗಿದೆ.

ಫೆಬ್ರವರಿ 27ರಿಂದ ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳಿಸಲು ಶುರು ಮಾಡಿದ್ದರು. ಅಕೌಂಟ್ ಬ್ಲಾಕ್ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಮರ್ಮಾಂಗದ ಫೋಟೋ ಕಳುಹಿಸಿ 'ದರ್ಶನ್‌ಗಿಂತ ನಾನೇನು ಕಡಿಮೆ ಬಾ' ಎಂದು ಹೇಳಿದ್ದ. ಈ ರೀತಿಯ ಟಾರ್ಚರ್ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದ ಪವನ್‌ಗೆ ಹೇಳಿದ್ದರು. ಈ ವಿಚಾರ ದರ್ಶನ್‌ಗೆ ತಿಳಿದಿತ್ತು. ಬಳಿಕ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್‌ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್, ಹಲ್ಲೆಯಿಂದ ರೇಣುಕಾಸ್ವಾಮಿ ಸಾವುಕಂಡ ಬಳಿಕ ಆತಂಕಗೊಂಡು, ಶವ ಸಾಗಿಸಲು ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್‌ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಆ ಗ್ಯಾಂಗಿನವರನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ.

ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್‌ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತು. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

Tags:    

Similar News