Actor Darshan Case | ದರ್ಶನ್‌ ಅಂಡ್ ಗ್ಯಾಂಗ್‌ ಮತ್ತೆ ಐದು ದಿನ ಪೊಲೀಸ್‌ ಕಸ್ಟಡಿಗೆ

ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.;

Update: 2024-06-15 13:18 GMT
ದರ್ಶನ್‌ ಮತ್ತು ಗ್ಯಾಂಗ್‌ ಅನ್ನು ಮತ್ತೆ ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.
Click the Play button to listen to article

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್(Actor Darshan), ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳನ್ನು ಪೊಲೀಸರು ಶನಿವಾರ (ಜೂ.15) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶಿಸಿದೆ.

ದರ್ಶನ್ ಸೇರಿ ಎಲ್ಲಾ ಆರೋಪಿಗಳ ಪೊಲೀಸ್ ಕಸ್ಟಡಿ ಭಾನುವಾರ (ಜೂ.16) ಅಂತ್ಯವಾಗಲಿದೆ. ನಾಳೆ ಸರ್ಕಾರಿ ರಜೆ ಇರುವುದರಿಂದ ಆರೋಪಿಗಳನ್ನು ಇಂದೇ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಎಪಿಪಿ ಪ್ರಸನ್ನಕುಮಾರ್ ಮತ್ತು ಆರೋಪಿಗಳ ಪರ ವಕೀಲರ ವಾದ ಆಲಿಸಿದ ಬಳಿಕ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ಆದೇಶ ನೀಡಿದರು. ಒಟ್ಟು 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಿದ್ದು, ಜೂನ್‌ 20ರ ವರೆಗೆ ಪೊಲೀಸ್‌ ಕಸ್ಟಡಿ ಮುಂದುವರಿಯಲಿದೆ.

ವಾದ- ಪ್ರತಿವಾದ ಏನು?

ಪ್ರಕರಣದ ವಿಚಾರಣೆಯನ್ನು ನಡೆಸಿದ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು ಕೇಸ್‌ನ ಬಗ್ಗೆ ನ್ಯಾಯಾಧೀಶರಿಗೆ ಮಾಹಿತಿ ನೀಡಿ, ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು ಮತ್ತೆ ಪೊಲೀಸ್‌ ಕಸ್ಟಡಿಗೆ ನೀಡಬೇಕು ಎಂದು ಕೋರಿದರು. ಮತ್ತೊಂದೆಡೆ ಪೊಲೀಸರು ಸ್ಥಳ ಮಹಜರು, ಸಾಕ್ಷ್ಯಗಳ ಕುರಿತ ವರದಿಯನ್ನು ಮುಚ್ಚಿನ ಲಕೋಟೆಯಲ್ಲಿ ನ್ಯಾಯಾಧೀಶರಿಗೆ ಸಲ್ಲಿಸಿದರು. ಬೆಂಗಳೂರು, ಚಿತ್ರದುರ್ಗದಲ್ಲಿ ಮಹಜರು ನಡೆದಿದೆ, ಆದರೆ, ಮೈಸೂರಿನಲ್ಲಿ ಮಹಜರು ಬಾಕಿ ಇದೆ. ಹೀಗಾಗಿ ಕಸ್ಟಡಿಗೆ ನೀಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ದರ್ಶನ್‌ ಪರ ವಕೀಲ ಅನಿಲ್ ಬಾಬು ವಾದ ಮಂಡಿಸಿ, ಆರೋಪಿಗಳಿಗೆ ವಿಚಾರಣೆ ವೇಳೆ ಹಿಂಸೆ ಕೊಟ್ಟಿದ್ದಾರೆ. ಎಲ್ಲದಕ್ಕೂ ದರ್ಶನ್‌ ಕಾರಣ ಎಂದರೆ ಹೇಗೆ? ವಿಚಾರಣೆ ಹಂತದಲ್ಲಿದ್ದಾಗಲೇ ದರ್ಶನ್‌ ಮೇಲೆ ಎಲ್ಲಾ ಅರೋಪಗಳನ್ನು ಮಾಡುವುದು ಎಷ್ಟು ಸರಿ? ಆರೋಪಿಗಳ ಹೇಳಿಕೆಗಳೂ ಸೋರಿಕೆಯಾಗುತ್ತಿವೆ. ಹೀಗಾಗಿ ಮತ್ತೆ ಕಸ್ಟಡಿಗೆ ನೀಡುವುದು ಬೇಡ ಎಂದು ವಾದಿಸಿದರು.

ಮತ್ತೊಂದೆಡೆ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮುಂದುವರಿಸಿ‌, ರೇಣುಕಾಸ್ವಾಮಿಗೆ ಎಲೆಕ್ಟ್ರಿಕ್‌ ಶಾಕ್‌ ನೀಡಿ ಹಿಂಸೆ ನೀಡಲಾಗಿದೆ. ಆರೋಪಿಗಳು ಯಾವೆಲ್ಲಾ ಡಿವೈಸ್‌ ಬಳಸಿದ್ದಾರೋ, ಅವುಗಳನ್ನು ವಶಕ್ಕೆ ಪಡೆಯಬೇಕು. ಇದಕ್ಕೆ ಸಮಯಾವಕಾಶ ಬೇಕು. ಹೀಗಾಗಿ ಆರೋಪಿಗಳನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು, ಆರೋಪಿಗಳನ್ನು ಮತ್ತೆ 5 ದಿನ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ಹೀಗಾಗಿ ಅನ್ನಪೂರ್ಣೆಶ್ವರಿ ಠಾಣೆಗೆ ಆರೋಪಿಗಳನ್ನು ಕರೆದುಕೊಂಡು ಹೋಗಲಾಯಿತು.

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವರನ್ನು ಜೂನ್‌ 8ರಂದು ಕಿಡ್ನಾಪ್‌ ಮಾಡಿದ್ದ ದರ್ಶನ್‌ ಮತ್ತು ಗ್ಯಾಂಗ್‌, ಆತನ ಮೇಲೆ ಪೈಶಾಚಿಕ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಜೂ.9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ನಡೆಸಿದ್ದರು.

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 16 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

Tags:    

Similar News