ರೇಣುಕಾಸ್ವಾಮಿ ಕೊಲೆ ಪ್ರಕರಣ| ಆರೋಪ ಪಟ್ಟಿಯ ರಹಸ್ಯ ಮಾಹಿತಿ ಪ್ರಕಟಿಸಲು ನಿರ್ಬಂಧ

Update: 2024-09-10 12:53 GMT

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್‌ ಮಂಗಳವಾರ ಮಹತ್ವದ ಆದೇಶ ನೀಡಿದ್ದು, ಪ್ರಕರಣದ ಎರಡನೇ ಆರೋಪಿ ದರ್ಶನ್‌ ಕುರಿತ ಆರೋಪ ಪಟ್ಟಿಯ ರಹಸ್ಯ ವಿವರಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದೆ.

ತಮ್ಮ ವಿರುದ್ಧದ ದೋಷಾರೋಪ ಪಟ್ಟಿಯ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ನ್ಯಾಯಪೀಠ, ಈ ನಿರ್ಬಂಧಕಾಜ್ಞೆ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯ ಕುರಿತು ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ ಆರೋಪಪಟ್ಟಿಯ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರಮಾಡದಂತೆ ಕೋರ್ಟ್ ಮಾಧ್ಯಮಗಳಿಗೆ ತಾಕೀತು ಮಾಡಿದೆ.

ಇದೇ ಪ್ರಕರಣದಲ್ಲಿ ದರ್ಶನ್ ಪತ್ನಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ವಿಚಾರಣಾ ನ್ಯಾಯಾಲಯ, ದರ್ಶನ್ ವಿರುದ್ಧ ಯಾವುದೇ ಆಧಾರರಹಿತ ಮಾಹಿತಿ ಪ್ರಸಾರ ಮಾಡದಂತೆ ಈ ಹಿಂದೆಯೇ ನಿರ್ಬಂಧಕಾಜ್ಞೆ ವಿಧಿಸಿ ಆದೇಶಿಸಿದೆ. ಆದರೂ, ಮಾಧ್ಯಮಗಳು ಆರೋಪಪಟ್ಟಿಯ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡುತ್ತಿವೆ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೇ, ಮುಂದಿನ ಆದೇಶವರೆಗೂ ಮಾಧ್ಯಮಗಳು ಆರೋಪಪಟ್ಟಿಯಲ್ಲಿನ ರಹಸ್ಯ ಮಾಹಿತಿ ಪ್ರಸಾರ ಮಾಡುವುದು/ಮುದ್ರಿಸುವುದು/ಪ್ರಕಟಿಸುವುದು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಷನ್ ಆಕ್ಟ್ 1995ರ ನಿಯಮ 5 ಮತ್ತು ಸುಪ್ರೀಂ ಕೋರ್ಟ್‌ನ ತೀರ್ಪಿಗೆ ವಿರುದ್ಧವಾಗುತ್ತದೆ. ಹೀಗಾಗಿ ದರ್ಶನ್ ಕುರಿತಂತೆ ಆರೋಪಪಟ್ಟಿಯಲ್ಲಿನ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯಕ್ಕೆ ಸೂಚನೆ ನೀಡಿದ ಪೀಠ, ವಿಚಾರಣೆಯನ್ನು ಮುಂದೂಡಿತು.

ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಪೊಲೀಸರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಸೆಪ್ಟೆಂಬರ್ 4ರಂದು ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದ ಆರೋಪಿಗಳಿಗೆ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಈ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದಾರೆ.

ಆರೋಪಪಟ್ಟಿಯ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸುವಂತೆ ಕೋರಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

Tags:    

Similar News