Actor Darshan Case | ನಟ ದರ್ಶನ್ ನ್ಯಾಯಾಂಗ ಬಂಧನ ಆ.14 ರವರೆಗೆ ವಿಸ್ತರಣೆ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ನ್ಯಾಯಾಂಗ ಬಂಧನವನ್ನು ಬೆಂಗಳೂರು ನ್ಯಾಯಾಲಯ ಆ.14 ರವರೆಗೆ ವಿಸ್ತರಿಸಿದೆ.;
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರ ನ್ಯಾಯಾಂಗ ಬಂಧನವನ್ನು ಬೆಂಗಳೂರು ನ್ಯಾಯಾಲಯ ಆ.14 ರವರೆಗೆ ವಿಸ್ತರಿಸಿದೆ.
ನ್ಯಾಯಾಂಗ ಬಂಧನದ ಅವಧಿ ಗುರುವಾರಕ್ಕೆ ಮುಕ್ತಾಯವಾದ ಹಿನ್ನಲೆಯಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಮತ್ತು ಉಳಿದ ಆರೋಪಿಗಳನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು.
ಆ ಪೈಕಿ 13 ಜನ ಪರಪ್ಪನ ಅಗ್ರಹಾರದಿಂದ, ನಾಲ್ವರು ತುಮಕೂರು ಜೈಲಿಂದ ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ಹಾಜರಾಗಿದ್ದರು. ಮೊದಲಿಗೆ ಆರೋಪಿಗಳ ಹೆಸರು ಹೇಳಿ ಹಾಜರಾತಿ ಪಡೆದ ನ್ಯಾಯಾಧೀಶರಾದ 24 ನೇ ಎಸಿಎಂಎಂ ನ್ಯಾಯಾಲಯದ ನ್ಯಾ.ವಿಶ್ವನಾಥ್ ಸಿ. ಗೌಡರ್, ಆ ನಂತರ ಆ.14ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಹಿನ್ನಲೆ
ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಆರೋಪಿಗಳಲ್ಲಿ ಒಬ್ಬನಾದ ರಾಘವೇಂದ್ರ ಎಂಬಾತ ರೇಣುಕಾಸ್ವಾಮಿಯನ್ನು ದರ್ಶನ್ ಭೇಟಿ ನೆಪದಲ್ಲಿ ಬೆಂಗಳೂರಿನ ಆರ್ ಆರ್ ನಗರದ ಶೆಡ್‌ಗೆ ಕರೆತಂದಿದ್ದ. ಇದೇ ಶೆಡ್‌ನಲ್ಲಿಯೇ ಜೂನ್ 8 ರಂದು ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.
ನಂತರ ದರ್ಶನ್ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯ ಶವವನ್ನು ಮೋರಿಗೆ ಎಸೆದು ಹೋಗಿದ್ದರು ಎನ್ನಲಾಗಿದೆ. ಮೋರಿಯಲ್ಲಿ ತೇಲುತ್ತಿದ್ದ ಶವವನ್ನು ಬೀದಿನಾಯಿಗಳು ಕಚ್ಚಿ ಎಳೆದು ತಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗ ಈ ಕೊಲೆಯ ಹಿಂದಿನ ರೂವಾರಿ ದರ್ಶನ್ ಎಂದು ಆರೋಪಿಗಳು ಬಾಯಿಬಿಟ್ಟಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿತ್ತು. ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.