Actor Darshan Case | ನಟ ದರ್ಶನ್ಗೆ ಮತ್ತಷ್ಟು ಸಂಕಷ್ಟ
ತ್ವರಿತ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ವಿಶೇಷ ಕೋರ್ಟ್ ಸ್ಥಾಪನೆಗಾಗಿ ಪೊಲೀಸರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿದ್ದಾರೆ. ಕೊಲೆ ನಡೆದು ಎರಡು ತಿಂಗಳಾಗಿದ್ದು, ತನಿಖೆ ನಡೆಸಿದ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದ್ದಾರೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರವೇ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದ್ದು, ಪ್ರಕರಣದ ತ್ವರಿತಗತಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ವಿಶೇಷ ತ್ವರಿತಗತಿ ನ್ಯಾಯಾಲಯ ಸ್ಥಾಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸಾಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವುದಾದರೆ ಸಾಕಷ್ಟು ಸಮಯ ಹಿಡಿಯಲಿದೆ. ಹೀಗಾಗಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರತ್ಯೇಕ ಕೋರ್ಟ್ ಸ್ಥಾಪಿಸುವಂತೆ ಪೊಲೀಸರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಫಾಸ್ಟ್ಟ್ರ್ಯಾಕ್ ನ್ಯಾಯಾಲಯಕ್ಕೆ ಅಥವಾ ಸ್ಪೆಷಲ್ ಕೋರ್ಟ್ ಬೇಕು ಎಂದು ಪೊಲೀಸರು ಸರ್ಕಾರಕ್ಕೆ ಮನವಿ ಮಾಡಿದ್ದು, ಪ್ರತ್ಯೇಕ ಕೋರ್ಟ್ ವಿಚಾರವಾಗಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನೂ ಮುಗಿದಿಲ್ಲ. ಪೊಲೀಸರು ಕೆಲವು ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದಾರೆ. ತನಿಖೆ ಮುಗಿಸಿದ ಬಳಿಕ ಚಾರ್ಜ್‌ಶೀಟ್ ಸಲ್ಲಿಕೆ ಆಗಲಿದೆ. ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಸ್ಪೆಷಲ್ ಕೋರ್ಟ್ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ತಿಂಗಳ ಅಂತ್ಯದೊಳಗೆ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ.
ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಮತ್ತು ಗ್ಯಾಂಗ್ ರೇಣುಕಾಸ್ವಾಮಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಬಳಿಕ ಕಾಲುವೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.