ವಿಶೇಷ ಸಂಪುಟದಲ್ಲೇ ಒಳ ಮೀಸಲಾತಿ ಜಾರಿಗೊಳಿಸುವಂತೆ ʼಅಕ್ಸರʼ ಆಗ್ರಹ

ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ನೇಮಕಾತಿಗಳು ನಡೆದಿಲ್ಲ. ಲಕ್ಷಾಂತರ ಯುವಕರು ವಯೋಮಿತಿ ಮೀರುವ ಭಯದಲ್ಲಿದ್ದಾರೆ. ಆದ್ದರಿಂದ ಒಳಮೀಸಲಾತಿ ಜಾರಿಗೊಳಿಸಿ ನೇಮಕಾತಿಗೆ ಚಾಲನೆ ನೀಡಬೇಕು ಎಂದು ಸಂತೋಷ್‌ ಮರೂರು ತಿಳಿಸಿದರು.;

Update: 2025-08-12 13:29 GMT

ಮಾದಿಗ ಮತ್ತು ಉಪಜಾತಿಗಳ ಒಕ್ಕೂಟದಿಂದ ಒಳ ಮೀಸಲಾತಿ ಜಾರಿಗೊಳಿಸುವಂತೆ ಸಭೆ ಮಾಡಲಾಯಿತು. 

ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ನೀಡಿರುವ ವೈಜ್ಞಾನಿಕ ದತ್ತಾಂಶವನ್ನು ಆಧರಿಸಿ, ರಾಜ್ಯ ಸರ್ಕಾರವು ಆಗಸ್ಟ್ 16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು 'ಅಕ್ಸರ' ಸಂಘಟನೆಯ ಅಧ್ಯಕ್ಷ ಸಂತೋಷ್ ಮರೂರು ಅವರು ಒತ್ತಾಯಿಸಿದ್ದಾರೆ.

ಮಂಗಳವಾರ ಬೆಂಗಳೂರಿನ ಸರ್. ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಸರ್ಕಾರಿ ನೇಮಕಾತಿಗಳು ನಡೆದಿಲ್ಲ. ಇದರಿಂದಾಗಿ ಲಕ್ಷಾಂತರ ಯುವಕರು ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಆದ್ದರಿಂದ, ಸರ್ಕಾರವು ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಿ, ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು," ಎಂದು ಆಗ್ರಹಿಸಿದರು.

"ಮೂರು ದಶಕಗಳ ನಿರಂತರ ಹೋರಾಟದ ಫಲವಾಗಿ ಸರ್ಕಾರವು ಆಯೋಗವನ್ನು ರಚಿಸಿ, ವರದಿಯನ್ನು ಸ್ವೀಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇನ್ನು ವಿಳಂಬ ಮಾಡದೆ, ಆಗಸ್ಟ್ 16 ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಮೂಲಕ ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಬೇಕು," ಎಂದು ಅವರು ತಿಳಿಸಿದರು.

ಈಗಾಗಲೇ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಆಗಸ್ಟ್ 1 ರಂದು ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗಿದೆ ಎಂದು ನೆನಪಿಸಿದ ಅವರು, "ಒಂದು ವೇಳೆ ಸರ್ಕಾರವು ಒಳ ಮೀಸಲಾತಿ ಜಾರಿಗೊಳಿಸಲು ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸಿದರೆ, ರಾಜ್ಯಾದ್ಯಂತ ವಿವಿಧ ದಲಿತ ಸಂಘಟನೆಗಳ ಜೊತೆಗೂಡಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು," ಎಂದು ಎಚ್ಚರಿಕೆ ನೀಡಿದರು.

16ರಂದು ವಿಶೇಷ ಸಂಪುಟ ಸಭೆ

ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಸಿ, ಒಳ ಮೀಸಲಾತಿ ಕುರಿತ 1,766 ಪುಟಗಳ ವರದಿಯನ್ನು ಆಗಸ್ಟ್ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿತ್ತು. ಈ ವರದಿಯನ್ನು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಸರ್ಕಾರವು ಆಗಸ್ಟ್ 16 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 

Tags:    

Similar News