ಒಳ ಮೀಸಲಾತಿ ಅನುಷ್ಠಾನ ಹೋರಾಟಕ್ಕೆ ʼಅಕ್ಸರʼ ವಿದ್ಯಾರ್ಥಿ ಸಂಘಟನೆ ಬೆಂಬಲ
ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ಸ್ಪರ್ಧಾರ್ಥಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ;
ಪ್ರತಿಪಕ್ಷ ಬಿಜೆಪಿ ಹಾಗೂ ದಲಿತ ಸಂಘಟನೆಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ ʼಅಕ್ಸರʼ ಸಂಘಟನೆ ಅಧ್ಯಕ್ಷ ಸಂತೋಷ್ ಮರೂರು
ಒಳ ಮೀಸಲಾತಿ ನೀಡವಲ್ಲಿ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ಪ್ರತಿಪಕ್ಷ ಬಿಜೆಪಿ ಹಾಗೂ ದಲಿತ ಸಂಘಟನೆಗಳು ಆಗಸ್ಟ್ 1ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಹಾಗೂ ಸಂಶೋಧಕರ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಈ ಕುರಿತು ʼಅಕ್ಸರʼ ಸಂಘಟನೆ ಅಧ್ಯಕ್ಷ ಸಂತೋಷ್ ಮರೂರು ʼದ ಪೆಢರಲ್ ಕರ್ನಾಟಕʼದೊಂದಿಗೆ ಮಾತನಾಡಿ, " ಸರ್ಕಾರ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ನೀಡಲು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ನೇಮಕ ಮಾಡಿ ಸಮೀಕ್ಷೆ ಮಾಡಿಸಿರುವುದು ಸ್ವಾಗತರ್ಹ, ಆದರೆ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಇದರಿಂದ ಸ್ಪರ್ಧಾರ್ಥಿಗಳು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ" ಎಂದರು.
" ಒಳ ಮೀಸಲಾತಿ ಜಾರಿ ಮಾಡಲು ವಿಳಂಬ ಮಾಡಿದಷ್ಟು ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಈಗಾಗಲೇ ಹಲವಾರು ಸ್ಪರ್ಧಾರ್ಥಿಗಳು ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಕುಟುಂಬಗಳನ್ನು ತೊರೆದು ಲಕ್ಷಾಂತರ ಯುವಕರು ಸರ್ಕಾರಿ ಹುದ್ದೆ ಪಡೆಯಬೇಕೆಂಬ ಹಂಬಲದೊಂದಿಗೆ ಗ್ರಂಥಾಲಯಗಳಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಸರ್ಕಾರ ಯಾವಾಗ ಅಧಿಸೂಚನೆ ಹೊರಡಿಸುತ್ತದೆಯೋ ಎಂಬ ಆಸೆಕಂಗಳಿಂದ ಕಾಯುತ್ತಿದ್ದಾರೆ" ಎಂದು ತಿಳಿಸಿದರು.
ಆಗಸ್ಟ್ 1 ರಂದು ಪ್ರತಿಪಕ್ಷ ಬಿಜೆಪಿ ಹಾಗೂ ದಲಿತ ಸಂಘಟನೆಗಳು ನಡೆಸುವ ಪ್ರತಿಭಟನೆಯಲ್ಲಿ ʼಅಕ್ಸರʼ ಸಂಘಟನೆ ಪಾಲ್ಗೊಳ್ಳಲಿದೆ. ರಾಜ್ಯ ಸರ್ಕಾರ ಶೀಘ್ರವೇ ಒಳ ಮೀಸಲಾತಿ ಜಾರಿಗೊಳಿಸಿ ಖಾಲಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಬೇಕು. ಈ ಮೂಲಕ ಎಲ್ಲಾ ವರ್ಗದ ಸ್ಪರ್ಧಾರ್ಥಿಗಳ ಹಿತ ಕಾಪಾಡಬೇಕು. ತಪ್ಪಿದಲ್ಲಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.