ಸಿಗಂದೂರು ಸೇತುವೆ ಲೋಕಾರ್ಪಣೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಆರೋಪ; ಪ್ರಧಾನಿ ಮೋದಿಗೆ ಸಿಎಂ ಪತ್ರ

ಈ ಕಾರ್ಯಕ್ರಮದ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.;

Update: 2025-07-14 16:11 GMT

ಸಿಗಂಧೂರು ಚೌಡೇಶ್ವರಿ ಸೇತುವೆ ಉದ್ಘಾಟನೆ ಸಮಾರಂಭದ ವೇಳೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 88 ಕಿಲೋಮೀಟರ್ ಉದ್ದದ ಒಂಬತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು 2,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಲೋಕಾರ್ಪಣೆಗೊಳಿಸಲಾಗಿತ್ತು.


ಈ ಕಾರ್ಯಕ್ರಮದ ಬಗ್ಗೆ ರಾಜ್ಯ ಸರ್ಕಾರದೊಂದಿಗೆ ಯಾವುದೇ ಸಮಾಲೋಚನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಿಎಂ ಮೋದಿಗೆ ಬರೆದ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದ ಮಾಹಿತಿ ತಮಗೆ ಬೇರೆ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೆ, ತಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುಂಚಿತವಾಗಿ ತಿಳಿಸದೆ ಪ್ರಕಟಿಸಲಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮ ನಡೆದ ದಿನವೇ ವಿಜಯನಗರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಮತ್ತೊಂದು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿತ್ತು. ಜುಲೈ 11ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಾಗರ ಕಾರ್ಯಕ್ರಮವನ್ನು ಮುಂದೂಡುವಂತೆ ಕೋರಿದ್ದರೂ ಪರಿಗಣಿಸಿಲ್ಲ ಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.

ಆಹ್ವಾನ ಪತ್ರಿಕೆಯಲ್ಲಿ ಕ್ರಮಬದ್ಧತೆ ಇಲ್ಲ ಎಂಬ ಆರೋಪ

ಕಾರ್ಯಕ್ರಮದ ಆಯೋಜಕರ ವಿರುದ್ಧ ಸಿದ್ದರಾಮಯ್ಯ ಪತ್ರದ ಮೂಲ ತೀವ್ರ ಟೀಕೆಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದಿರುವ ಅವರು ಆಹ್ವಾನ ಪತ್ರಿಕೆಯಲ್ಲಿ ಮಾಜಿ ಮುಖ್ಯಮಂತ್ರಿಯ ಹೆಸರನ್ನು ಉಪಮುಖ್ಯಮಂತ್ರಿ ಮತ್ತು ಇತರ ರಾಜ್ಯದ ಗಣ್ಯರ ಹೆಸರಿಗಿಂತ ಮೊದಲು ಮುದ್ರಿಸಲಾಗಿದೆ. ರಾಜ್ಯ ಸರ್ಕಾರದ ಒಪ್ಪಿಗೆ ಇಲ್ಲದಿದ್ದರೂ ಕಾರ್ಯಕ್ರಮ ಮುಂದುವರಿಸಿರುವುದು ಶಿಷ್ಟಾಚಾರ ಉಲ್ಲಂಘನೆ ಎಂದು ದೂರಿದ್ದಾರೆ.

ಶರಾವತಿ ಹಿನ್ನೀರಿನ ಮೇಲಿನ ಸೇತುವೆ, ರಾಷ್ಟ್ರೀಯ ಹೆದ್ದಾರಿ 369ಇ ಯೋಜನೆಯ ಭಾಗವಾಗಿದೆ. ಇದನ್ನು 2013ರಲ್ಲಿ ರಾಜ್ಯ ಸರ್ಕಾರವೇ ಮೊದಲು ರೂಪಿಸಿತ್ತು ಮತ್ತು ನಂತರ ಕೇಂದ್ರವು ಜಾರಿಗೊಳಿಸಿತ್ತು. ತಾಂತ್ರಿಕ ವರದಿಗಳ ಪ್ರಕಾರ, ಯೋಜನೆಯ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರದ ಈ ಕ್ರಮಗಳನ್ನು ಸಂವಿಧಾನದ ಆಶಯವಾಗಿರುವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಎಲ್ಲ ಕೇಂದ್ರ ಸಚಿವಾಲಯಗಳಿಗೆ ಸಲಹೆ ನೀಡುವಂತೆ ಅವರು ಪ್ರಧಾನಮಂತ್ರಿಗಳನ್ನು ಕೋರಿದ್ದಾರೆ.  

Tags:    

Similar News