ಕಾರಾಗೃಹ ಇಲಾಖೆಯ ನೂತನ ಡಿಜಿಪಿಯಾಗಿ ಅಲೋಕ್ ಕುಮಾರ್ ಅಧಿಕಾರ ಸ್ವೀಕಾರ
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಕಾರಾಗೃಹ ಇಲಾಖೆಯ ನೂತನ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರು ಕಾರಾಗೃಹ ಇಲಾಖೆಯ ನೂತನ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಫ್ರೀಡಂ ಪಾರ್ಕ್ ಮುಂಭಾಗದಲ್ಲಿರುವ ಕಾರಾಗೃಹ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಅವರು, ʻʻಕಾರಾಗೃಹಗಳ ಸುಧಾರಣೆಗೆ ಆದ್ಯತೆ ನೀಡಲಾಗುವುದು. ಈ ಬಗ್ಗೆ ನಮ್ಮ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಬೇಕಿದೆ. ಬೈಲಹೊಂಗಲ ಕಾರಾಗೃಹ ಸೇರಿದಂತೆ ರಾಜ್ಯದ ಮೂಲೆ ಮೂಲೆಯಲ್ಲೂ ನಾನು ಕೆಲಸ ಮಾಡಿದ್ದು, ಇರುವ ಸಮಸ್ಯೆಗಳನ್ನು ಅರಿತು ಅದನ್ನು ಪರಿಹರಿಸುವ ಕೆಲಸ ಮಾಡಲಾಗುವುದು," ಎಂದು ಭರವಸೆ ನೀಡಿದರು.
ಇದೇ ವೇಳೆ, ಈ ಹಿಂದೆ ಕಾರಾಗೃಹ ಇಲಾಖೆಯ ಮುಖ್ಯಸ್ಥರಾಗಿದ್ದ ಬಿ. ದಯಾನಂದ್ ಅವರನ್ನು ಪೊಲೀಸ್ ತರಬೇತಿ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕರಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
8 ತಿಂಗಳ ಹೋರಾಟಕ್ಕೆ ಜಯ
ಅಲೋಕ್ ಕುಮಾರ್ ಅವರು ಡಿಜಿಪಿ ಹುದ್ದೆಗೆ ಬಡ್ತಿ ಪಡೆದು, ಕಾರಾಗೃಹ ಇಲಾಖೆಯ ಉನ್ನತ ಹುದ್ದೆಗೆ ನೇಮಕಗೊಂಡಿದ್ದಾರೆ. ಹಿಂದೆ ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಅಂದು ಅಲೋಕ್ ಕುಮಾರ್ ಅವರು ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದರು. ಈ ಪ್ರಕರಣದ ಬಗ್ಗೆ ಸಿಬಿಐ 'ಬಿ ರಿಪೋರ್ಟ್' ಸಲ್ಲಿಸಿದ್ದರೂ, 2025ರ ಮೇ ತಿಂಗಳಲ್ಲಿ ರಾಜ್ಯ ಸರ್ಕಾರವು ಇಲಾಖಾ ತನಿಖೆಗೆ ಆದೇಶಿಸಿತ್ತು.
ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಡಿಜಿಪಿ ಹುದ್ದೆಯ ಮುಂಬಡ್ತಿಗಾಗಿ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ಸಿಎಟಿ ನ್ಯಾಯಮಂಡಳಿಯು ಅವರ ವಿರುದ್ಧ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿ, ತಕ್ಷಣವೇ ಬಡ್ತಿ ಮತ್ತು ಸಂಬಂಧಿತ ಸೌಲಭ್ಯಗಳನ್ನು ನೀಡುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಇದೀಗ ಈ ಕ್ರಮ ಕೈಗೊಂಡಿದೆ. ಈ ಬೆಳವಣಿಗೆಯಿಂದಾಗಿ ಅಲೋಕ್ ಕುಮಾರ್ ಅವರ ಎಂಟು ತಿಂಗಳ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಅಲೋಕ್ ಕುಮಾರ್ ಅವರು ಈ ಹಿಂದೆ ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತರು ಮತ್ತು ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಮಹತ್ವದ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.