ಅಂಗನವಾಡಿ ಯೋಜನೆಗೆ ಸುವರ್ಣ ಸಂಭ್ರಮ, ಇಂದು ಮೂರು ನೂತನ ಯೋಜನೆಗೆ ಖರ್ಗೆ, ಸಿಎಂ ಚಾಲನೆ
ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮತ್ತು ಭದ್ರತೆಗಾಗಿ ಅಕ್ಕಪಡೆ ಯೋಜನೆಯ ಹಾಗೂ 5,000 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಆರಂಭಿಸುವ ಯೋಜನೆ ಘೋಷಣೆ ಮಾಡಲಿದ್ದಾರೆ.
ಅಂಗನವಾಡಿ ಕೇಂದ್ರ (ಸಾಂದರ್ಭಿಕ ಚಿತ್ರ)
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ಶುಕ್ರವಾರ(ನ.28) ಮೂರು ಐತಿಹಾಸಿಕ ಯೋಜನೆಗಳಿಗೆ ಚಾಲನೆ ನೀಡಲು ನಿರ್ಧರಿಸಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ. ಜಿ.ಪರಮೇಶ್ವರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದು, 30 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನೇನು ಕಾರ್ಯಕ್ರಮ?
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರಿಕ ದಿನಾಚರಣೆ, ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂರು ಮಹಾತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮೀ ವಿವಿದೋದ್ದೇಶ ಸಹಕಾರ ಸಂಘದ ಉದ್ಘಾಟನೆ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಮತ್ತು ಭದ್ರತೆಗಾಗಿ ಅಕ್ಕಪಡೆ ಯೋಜನೆಯ ಹಾಗೂ 5,000 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ಆರಂಭಿಸುವ ಯೋಜನೆ ಘೋಷಣೆ ಮಾಡಲಿದ್ದಾರೆ.
ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರಿ ಸಂಘ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯೂ ಯಶಸ್ವಿಯಾಗಿ ಸಾಗುತ್ತಿದ್ದು, ಸುಮಾರು 1.24 ಕೋಟಿ ಫಲಾನುಭವಿಗಳಿಗೆ ಇದುವರೆಗೂ 52 ಸಾವಿರ ಕೋಟಿ ರೂಪಾಯಿಗೂ ಅಧಿಕ ಹಣವನ್ನು ಸಂದಾಯ ಮಾಡಲಾಗಿದೆ. ಇದೀಗ ಈ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರಿ ಸಂಘವನ್ನು ಸ್ಥಾಪಿಸಲಾಗುತ್ತಿದೆ. ಫಲಾನುಭವಿಗಳು ಷೇರುದಾರರಾಗಿರುತ್ತಾರೆ. ಈ ಮಹಿಳಾ ಸಹಕಾರಿ ಬ್ಯಾಂಕ್ ಕನಿಷ್ಠ 1,000 ಕೋಟಿ ರೂ. ಕಾರ್ಯನಿರತ ಬಂಡವಾಳವನ್ನು ಹೊಂದುವ ನಿರೀಕ್ಷೆಯಿದೆ. ಇದರಿಂದಾಗಿ ರಾಜ್ಯಾದ್ಯಂತ ಮಹಿಳೆಯರಲ್ಲಿ ಆರ್ಥಿಕ ಸ್ವಾತಂತ್ರ್ಯವನ್ನು ಹೆಚ್ಚಿಸಲು ಅನುಕೂಲವಾಗುತ್ತದೆ.
ಅಕ್ಕ ಪಡೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸದಾ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುತ್ತಾ ಬಂದಿದ್ದು, ಈ ಬದ್ಧತೆಯನ್ನು ಮತ್ತಷ್ಟು ಬಲಪಡಿಸಲು, ಇಡೀ ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಅಕ್ಕ ಪಡೆ ಯೋಜನೆಯನ್ನು ಇಲಾಖೆ ಮುಖಾಂತರ ಪರಿಚಯಿಸಲಾಗುತ್ತಿದೆ. ಪ್ರತಿಯೊಂದು ಅಕ್ಕ ಪಡೆಯು ತರಬೇತಿ ಪಡೆದ 10 ಮಹಿಳೆಯರನ್ನು ಒಳಗೊಂಡಿರುತ್ತದೆ. ವಾಹನ ವ್ಯವಸ್ಥೆ ಹೊಂದಿರುವ ಈ ತಂಡವು ಎರಡು ಪಾಳಿಗಳಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುತ್ತದೆ. ಶಾಲಾ ಬಾಲಕಿಯರು, ಹದಿಹರೆಯದ ಹುಡುಗಿಯರು, ಕೆಲಸ ಮಾಡುವ ಮಹಿಳೆಯರು ಮತ್ತು ಎಲ್ಲಾ ವಯೋಮಾನದ ಮಹಿಳೆಯರ ಸುರಕ್ಷತೆಯತ್ತ ಗಮನಹರಿಸುವ ಅಕ್ಕ ಪಡೆಯು ರಾಜ್ಯ ಗೃಹ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕದಾದ್ಯಂತ ಮಹಿಳೆಯರಲ್ಲಿ ಹೆಚ್ಚಿನ ಆತ್ಮವಿಶ್ವಾಸ ತುಂಬುವ ಗುರಿಯನ್ನು ಹೊಂದಿದೆ.
ಅಂಗನವಾಡಿ ಕೇಂದ್ರಗಳಲ್ಲಿ (ಎಲ್‌ಕೆಜಿ, ಯುಕೆಜಿ) ಆರಂಭ
ದೇಶದಲ್ಲಿಯೇ ಮೊದಲ ಬಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಮತ್ತು ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ ಮತ್ತು ಈ ಕ್ರಮವು ಮಕ್ಕಳಲ್ಲಿ ಪ್ರಾಥಮಿಕ ಕಲಿಕೆಯನ್ನು ಹೆಚ್ಚಿಸುತ್ತಿದೆ. ಈ ಯೋಜನೆಯನ್ನು 2025ರ ನವೆಂಬರ್‌ನಲ್ಲಿ ರಾಜ್ಯಾದ್ಯಂತ 5,000 ಅಂಗನವಾಡಿ ಕೇಂದ್ರಗಳಿಗೆ ವಿಸ್ತರಿಸಲಾಗುತ್ತಿದೆ. ಈ ಯೋಜನೆಯಿಂದ 3 ರಿಂದ 6 ವರ್ಷ ವಯಸ್ಸಿನ 1 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪ್ರಯೋಜನವಾಗಲಿದೆ.