ಅನ್ನ ಭಾಗ್ಯ ಯೋಜನೆ | ನಗದು/ ಅಕ್ಕಿ ಬದಲಿಗೆ ಬೇಳೆಕಾಳು, ಎಣ್ಣೆ ವಿತರಿಸಲು ಚಿಂತನೆ
ಬಡತನ ರೇಖೆಗಿಂತ ಕೆಳಗಿರುವ ಕಾರ್ಡುದಾರರಿಗೆ ಅನ್ನಭಾಗ್ಯ ಯೋಜನೆಯಡಿ ನಗದು ಅಥವಾ ಅಕ್ಕಿ ಬದಲಿಗೆ ಬೇಳೆಕಾಳುಗಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ.
ಬಡತನ ರೇಖೆಗಿಂತ ಕೆಳಗಿರುವ ಕಾರ್ಡುದಾರರಿಗೆ ಅನ್ನಭಾಗ್ಯ ಯೋಜನೆಯಡಿ ನಗದು ಅಥವಾ ಅಕ್ಕಿ ಬದಲಿಗೆ ಬೇಳೆ ಕಾಳುಗಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ವಿತರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಮಂಗಳವಾರ ಹೇಳಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಾದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಆದರೆ, ಕೇವಲ 5 ಕೆಜಿ ಅಕ್ಕಿ ಮಾತ್ರ ಪೂರೈಸಲು ಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಾಕಿ 5 ಕೆಜಿ ಅಕ್ಕಿಯ ಬದಲಿಗೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ನಗದು ನೀಡಲಾಗುತ್ತಿದೆ. ಇತ್ತೀಚಿನ ಸಮೀಕ್ಷೆಯ ಪ್ರಕಾರ 93 ಪ್ರತಿಶತ BPL ಕಾರ್ಡ್ ಹೊಂದಿರುವವರು ಬೇಳೆಕಾಳುಗಳು, ಸಕ್ಕರೆ ಅಥವಾ ಅಡುಗೆ ಎಣ್ಣೆಯನ್ನು ಪಡೆಯಲು ಒಲವು ತೋರಿದ್ದಾರೆ. ಹೀಗಾಗಿ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಕುರಿತು ಚರ್ಚಿಸುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ದೆಹಲಿಯಲ್ಲಿರುವ ಸಚಿವ ಮುನಿಯಪ್ಪ ಅವರು ಮಂಗಳವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಒದಗಿಸುವಂತೆ ಮನವಿ ಮಾಡಿದರು.
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅಕ್ಕಿ ಮಾರಾಟ ಮಾಡಲು ಒಪ್ಪಿಕೊಂಡಿದೆ. ಅಗತ್ಯ ಅಕ್ಕಿಯನ್ನು ನೀಡಲಾಗುತ್ತದೆ. ಮಾಸಿಕ 20 ಸಾವಿರ ಮೆಟ್ರಿಕ್ ಟನ್ ಅಕ್ಕಿ ಬೇಕಾಗುತ್ತದೆ. ಕೇಂದ್ರ ನೀಡಲು ಆರಂಭಿಸಿದ ಕೂಡಲೇ ಫಲಾನುಭವಿಗಳಿಗೆ ಸಂಪೂರ್ಣ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆಂದು ತಿಳಿಸಿದರು.
ರಾಜ್ಯ ಸರ್ಕಾರ ಘೋಷಿಸಿದ್ದ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗದ ಕಾರಣ, ಅಕ್ಕಿ ಬದಲು ಹಣವನ್ನು ಸರ್ಕಾರ ಫಲಾನುಭವಿಗಳಿಗೆ ನೀಡುತ್ತಿತ್ತು. ತಲಾ ಒಂದು ಕೆಜಿಗೆ 34 ರೂಪಾಯಿಯಂತೆ 170 ರೂಪಾಯಿ ಖಾತೆ ನೀಡಲಾಗುತ್ತಿತ್ತು.
ಗ್ಯಾರಂಟಿ ಯೋಜನೆ ಪರಿಷ್ಕರಣೆ ಚರ್ಚೆ ಆಗಿಲ್ಲ
'ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಆದರೆ, ಪಕ್ಷದ ವೇದಿಕೆಯಲ್ಲಿ ಅಥವಾ ಸರ್ಕಾರದ ಹಂತದಲ್ಲಿ ಈ ವಿಷಯ ಚರ್ಚೆ ಆಗಿಲ್ಲ' ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
'ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ' 'ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯ. ಈಗಾಗಲೇ ಬಜೆಟ್ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹ 56 ಸಾವಿರ ಕೋಟಿ ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ' ಎಂದು ಗೃಹ ಸಚಿವ ಜಿ.ಪರಮೇಶ್ವರ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
'ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು' ಎಂದ ಅವರು, 'ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯ ಆಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ.