Prajwal Revanna Case | ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್‌ಐಟಿ ವಿಚಾರಣೆ ಎದುರಿಸುತ್ತಿರುವ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.;
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಿಚಾರಣೆ ಎದುರಿಸುತ್ತಿರುವ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕಳೆದ ವಾರ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್, ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದಿಂದ ಆದೇಶ ಪ್ರಕಟವಾಗಿದ್ದು, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇಂದು ನಿರೀಕ್ಷಣಾ ಜಾಮೀನು ಅರ್ಜಿಯ ಅಂತಿಮ ಆದೇಶವನ್ನು ಪೀಠ ಪ್ರಕಟಿಸಿದೆ.
“ಪೊಲೀಸರು ಮುಂದಿಟ್ಟ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರವನ್ನೇ ಕೊಡಬೇಕೆಂದಿಲ್ಲ” ಎಂದು ಕೋರ್ಟ್ ಪೀಠ ಹೇಳಿದೆ. “ಸಂತ್ರಸ್ತೆಗೆ ಭವಾನಿ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಅಕ್ಕ ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ” ಎಂದೂ ಕೋರ್ಟ್ ಗಮನಿಸಿದೆ.
ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ಹೈಕೋರ್ಟ್ ವಿಧಿಸಿದೆ. ತನಿಖೆಗೆ ಎಸ್‌ಐಟಿಗೆ ಸಹಕರಿಸಬೇಕು ಎಂದು ಆದೇಶಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೊಳಗಾದ ಸಂತ್ರಸ್ತೆಯ ಮಗ, ತಮ್ಮ ಆ ಪೆನ್‌ಡ್ರೈವ್‌ನಲ್ಲಿ ತಮ್ಮ ತಾಯಿಯ ವಿಡಿಯೋ ಕೂಡ ಸೆರೆಯಾಗಿದೆ. ಸದ್ಯ ನಮ್ಮ ತಾಯಿ ಕಣ್ಮರೆ ಆಗಿದ್ದಾರೆ ಎಂದು ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದೇ ಪ್ರಕರಣ ವಿಚಾರವಾಗಿ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿ ಮಾಡಿತ್ತು.