ರಾಜ್ಯ ಸರ್ಕಾರ ವಜಾಗೊಳಿಸಲು ರಾಷ್ಟ್ರಪತಿಗೆ ದೂರು: ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸುತ್ತಿದ್ದರೂ ಸರ್ಕಾರದ ಈ ಆತುರದ ನಿರ್ಧಾರ ಆರೋಪಿಗಳನ್ನು ರಕ್ಷಿಸುವ ರೀತಿಯಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ
ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಹಾಗೂ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಒತ್ತಾಯಿಸಿ ಶೀಘ್ರವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮಂಗಳೂರಿನ ಬಂಟ್ವಾಳದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಭ್ರಷ್ಟಾಚಾರ ರಹಿತ ಆಡಳಿತದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಳೆದ ಒಂದೂವರೆ ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಾಗದೇ ಜನರೇ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಇಂತಹ ದುರಾಡಳಿತ ನೀಡುತ್ತಿರುವ ರಾಜ್ಯ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಒತ್ತಾಯಿಸುತ್ತೇವೆ. ಮಿತ್ರ ಪಕ್ಷ ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.
ಅಹಿಂದ ಮಂತ್ರ ಜಪಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ಸಮುದಾಯಗಳಿಗೆ ಘೋರ ಅನ್ಯಾಯ ಮಾಡುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ 87 ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದರು. ಈಗ 14 ನಿವೇಶನ ಹಿಂತಿರುಗಿಸುವ ಮೂಲಕ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಕಳೆದ ಒಂದೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಒಂದೇ ಒಂದು ಹೊಸ ಯೋಜನೆ ಘೋಷಿಸಿಲ್ಲ. ಯಾವುದೇ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸ ಮಾಡಲು ಆಗಿಲ್ಲ. ಆಡಳಿತ ಪಕ್ಷದ ಶಾಸಕ ರಾಜು ಕಾಗೆ ಅವರೇ ಅಭಿವೃದ್ಧಿಗೆ ಹಣದ ಕೊರತೆ ಇದೆ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಇದು ಸರ್ಕಾರದ ಶೂನ್ಯ ಅಭಿವೃದ್ಧಿಗೆ ಹಿಡಿದ ಕನ್ನಡಿ ಎಂದು ದೂರಿದರು.
2022ರ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಗೃಹ ಸಚಿವ ಜಿ.ಪರಮೇಶ್ವರ ನೇತೃತ್ವದ ಉಪ ಸಮಿತಿ ಶಿಫಾರಸು ಮಾಡಿದೆ. ಅದರ ಆಧಾರದಲ್ಲಿ ಪ್ರಕರಣ ಹಿಂಪಡೆಯಲು ಸರ್ಕಾರ ಕೂಡ ನಿರ್ಧರಿಸಿದೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸುತ್ತಿದ್ದರೂ ಸರ್ಕಾರದ ಈ ಆತುರದ ನಿರ್ಧಾರ ಆರೋಪಿಗಳನ್ನು ರಕ್ಷಿಸುವ ರೀತಿಯಲ್ಲಿದೆ ಎಂದು ಆರೋಪಿಸಿದರು.
ಸರ್ಕಾರದ ದುರಾಡಳಿತ ಖಂಡಿಸಿ ಅ. 25 ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲಿದೆ. ಬಿಜೆಪಿ ಯುವ ಕಾರ್ಯಕರ್ತ ಮತ್ತು ಹಿಂದುತ್ವವಾದಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ದಕ್ಷಿಣ ಕನ್ನಡದ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ. ಅವರು ಭಾರೀ ಅಂತರದಿಂದ ಗೆಲ್ಲಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
ಸಿದ್ದರಾಮಯ್ಯ ಅವರಿಗೆ ದೇಶಭಕ್ತರು, ದೇಶವಿರೋಧಿಗಳು ಯಾರೆಂಬುದು ಗೊತ್ತಿಲ್ಲ. ರಾಷ್ಟ್ರವಿರೋಧಿಗಳನ್ನು ಸಂಘ ಪರಿವಾರದ ಜೊತೆ ಹೋಲಿಸಿರುವ ಅವರು, ರಾಜ್ಯದಲ್ಲಿ ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಸರ್ಕಾರ ಯಾವ ನೀತಿ ಅನುಸರಿಸಿತು ಎಂಬುದು ಗೊತ್ತಿದೆ ಎಂದು ತಿರುಗೇಟು ನೀಡಿದರು.
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿ ಅಭ್ಯರ್ಥಿ ಇನ್ನೂ ನಿರ್ಧಾರವಾಗಿಲ್ಲ, ಪಕ್ಷದ ರಾಷ್ಟ್ರೀಯ ನಾಯಕರು ಎನ್ ಡಿಎ ಅಭ್ಯರ್ಥಿಯನ್ನು ನಿರ್ಧರಿಸಲಿದ್ದಾರೆ ಎಂದರು.