ಎಂಟು ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲಿ ಪಿಜಿ ವೈದ್ಯಕೀಯ ಕೋರ್ಸ್‌ ಆರಂಭಕ್ಕೆ ಅನುಮೋದನೆ

ಮುಂದಿನ ಶೈಕ್ಷಣಿಕ ವರ್ಷದಿಂದ ಎಂಟು ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ತಜ್ಞ ವೈದ್ಯರ ಸಂಖ್ಯೆ ಹೆಚ್ಚಿಸುವ ಗುರಿ ಹೊಂದಿದೆ

Update: 2025-11-08 10:21 GMT
Click the Play button to listen to article

ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇಟ್ಟಿರುವ ರಾಜ್ಯದ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದಿಂದ ಎಂಟು ಸರ್ಕಾರಿ ಜಿಲ್ಲಾ ಆಸ್ಪತ್ರೆಗಳಲ್ಲಿ ಸ್ನಾತಕೋತ್ತರ ವೈದ್ಯಕೀಯ (ಎಂಡಿ/ಎಂಎಸ್‌) ಕೋರ್ಸ್‌ಗಳನ್ನು ಆರಂಭಿಸಲು ಅನುಮೋದನೆ ನೀಡಿದೆ. ಈ ನಿರ್ಧಾರವು ರಾಜ್ಯದಲ್ಲಿ ತಜ್ಞ ವೈದ್ಯರ ಸಂಖ್ಯೆಯನ್ನು ಹೆಚ್ಚಿಸುವ ಗುರಿ ಹೊಂದಿದೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ 'ಸ್ನಾತಕೋತ್ತರ ಪದವಿ ವೈದ್ಯಕೀಯ ಶಿಕ್ಷಣ ನಿಯಮಾವಳಿ 2023 ಅನ್ವಯ 220 ಕನಿಷ್ಠ ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಜಿಲ್ಲಾ ಆಸ್ಪತ್ರೆಗಳಲ್ಲಿ ಸ್ನಾತಕೋತ್ತರ ಕೋರ್ಸ್‌ಗಳನ್ನು ಪ್ರಾರಂಭಿಸಲು ಅರ್ಹವಾಗಿರುತ್ತವೆ. ವಿಜಯಪುರ ಜಿಲ್ಲಾಸ್ಪತ್ರೆ , ಬಾಗಲಕೋಟೆ ಜಿಲ್ಲಾಸ್ಪತ್ರೆ, ತುಮಕೂರು ಜಿಲ್ಲಾಸ್ಪತ್ರೆ, ಕೋಲಾರ ಜಿಲ್ಲಾಸ್ಪತ್ರೆ, ಜಯನಗರ ಸರ್ಕಾರಿ ಆಸ್ಪತ್ರೆ, ಕೆ.ಸಿ.ಜನರಲ್‌ ಆಸ್ಪತ್ರೆ, ರಾಮನಗರ ಜಿಲ್ಲಾಸ್ಪತ್ರೆ, ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಸ್ನಾತಕೋತ್ತರ ಪದವಿ ಆರಂಭಿಸಲಾಗುವುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. 



ಸರ್ಕಾರಿ ಸೇವೆಯಲ್ಲಿ ತಜ್ಞ ವೈದ್ಯರ ಲಭ್ಯತೆಯನ್ನು ಹೆಚ್ಚಿಸುವುದು, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಹಂತದ ಆರೈಕೆ ಮತ್ತು ಶೈಕ್ಷಣಿಕ ಸಾಮರ್ಥ್ಯವನ್ನು ಬಲಪಡಿಸುವುದು, ರಾಷ್ಟ್ರೀಯ ವೈದ್ಯಕೀಯ ಆಯೋಗದ 'ಜಿಲ್ಲಾ ರೆಸಿಡೆನ್ಸಿ ಕಾರ್ಯಕ್ರಮ'ದ ಉದ್ದೇಶಗಳನ್ನು ಈಡೇರಿಸುವುದು, ಹೊರವಲಯದ ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆ, ಬೋಧನೆ ಮತ್ತು ಸಂಶೋಧನಾ ಚಟುವಟಿಕೆಗಳನ್ನು ಉತ್ತೇಜಿಸುವುದು ಇದರ ಉದ್ದೇಶವಾಗಿದೆ. 

ಈ ಕ್ರಮದ ಸಂಪೂರ್ಣ ಸಮನ್ವಯ ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಗೆ ವಹಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಬೋಧಕ ವರ್ಗದ ಹುದ್ದೆಗಳ ಸಮಾನತೆ, ಉಪನ್ಯಾಸಕರ ಬಳಕೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ನಿರಾಕ್ಷೇಪಣಾ ಪತ್ರ  ಮತ್ತು ಪರಿಶೀಲನಾ ಪ್ರಕ್ರಿಯೆಗಳಿಗೆ ಬೇಕಾದ ಅಗತ್ಯ ಸಹಕಾರವನ್ನು ನೀಡಲಿದೆ. 

Tags:    

Similar News