ASHA Workerʼs Strike | ಕೊರೆಯುವ ಚಳಿ ಮಧ್ಯೆಯೂ ನಿಲ್ಲದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣಾ ಫಲಕ ಪ್ರದರ್ಶಿಸಿದರು. ಘೋಷಣೆಗಳು, ಹೋರಾಟದ ಹಾಡಿನೊಂದಿಗೆ ಧರಣಿ ಕುಳಿತಿರುವ ಮಹಿಳೆಯರು ತಮ್ಮ ಬೇಡಿಕೆ ಈಡೇರಿಕೆಗಾಗಿ ಪಟ್ಟು ಹಿಡಿದಿದ್ದಾರೆ.;

Update: 2025-01-09 05:30 GMT
ಆಶಾ ಕಾರ್ಯಕರ್ತ ಹೋರಾಟ
Click the Play button to listen to article

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮೊದಲ ದಿನ ರಸ್ತೆಯಲ್ಲೇ ಮಲಗಿ ಹೋರಾಟ ಮುಂದುವರಿಸಿದ್ದರು. ಎರಡನೇ ದಿನವಾದ ಬುಧವಾರವೂ ಅಹೋರಾತ್ರಿ ಮುಷ್ಕರ ಮುಂದುವರಿಸಿದರು. 

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಘೋಷಣಾ ಫಲಕ ಪ್ರದರ್ಶಿಸಿದರು. ಘೋಷಣೆಗಳು, ಹೋರಾಟದ ಹಾಡಿನೊಂದಿಗೆ ಧರಣಿ ಕುಳಿತಿರುವ ಮಹಿಳೆಯರು ತಮ್ಮ ಬೇಡಿಕೆ ಈಡೇರಿಕೆಗಾಗಿ ಪಟ್ಟು ಹಿಡಿದಿದ್ದಾರೆ.

'ಮೂರು ತಿಂಗಳಿಂದ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹಧನದ ಮೊತ್ತವನ್ನು ಕೂಡಲೇ ಪಾವತಿಸಬೇಕು. ಕೆಲಸಕ್ಕೆ ತಕ್ಕಂತೆ ಪ್ರೋತ್ಸಾಹ ಧನ ಸಿಗದೇ ವಂಚನೆಯಾಗುತ್ತಿದೆ. ಆಶಾ ಕಾರ್ಯಕರ್ತೆಯರು ಸ್ವಂತ ಹಣದಲ್ಲಿ ಸ್ಮಾರ್ಟ್ ಫೋನ್ ಖರೀದಿಸಿ ಇಲಾಖೆ ಕೆಲಸಗಳಿಗೆ ಬಳಕೆ ಮಾಡಬೇಕೆಂಬ ಆದೇಶ ಹಿಂಪಡೆಯಬೇಕು. ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು' ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಎಐಯುಟಿಯುಸಿ ನೇತೃತ್ವದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ ಬುಧವಾರ ಲೋಕಾಯುಕ್ತ ನಿವೃತ್ತ ನ್ಯಾ| ಎನ್. ಸಂತೋಷ್ ಹೆಗ್ಡೆ ಅವರು ಪಾಲ್ಗೊಂಡು ಪ್ರತಿಭಟನೆ ಬೆಂಬಲಿಸಿ ನೈತಿಕ ಬಲ ತುಂಬಿದರು. ದುಡಿಯುವ ಯಾವುದೇ ವ್ಯಕ್ತಿಯಾದರೂ ತನ್ನ ಜೀವನಕ್ಕೆ ಬೇಕಾದ ಕನಿಷ್ಠ ಮೌಲ್ಯ ಪಡೆಯುವುದು ಸಂವಿಧಾನ ಬದ್ಧವಾದ ಮಾನವ ಹಕ್ಕು. ಅದು ವೇತನ, ಗೌರವಧನ ಅಥವಾ ಇನ್ನಾವುದೇ ರೂಪದಲ್ಲಿರಬಹುದು. ಅದನ್ನು ನೀಡಬೇಕಿರುವುದು ಸರ್ಕಾರದ ಕರ್ತವ್ಯ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಗೌರವಧನ ಹೆಚ್ಚಿಸಲು ಪ್ರಯತ್ನ 

ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಬಜೆಟ್‌ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ಅದರೊಂದಿಗೆ ಆಶಾ ಕಾರ್ಯಕರ್ತೆಯರ ಬೇಡಿಕೆಯ ವಿಷಯವನ್ನು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಅವರು ಭರವಸೆ ನೀಡಿದರು. 

ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು. ಆದರೆ ಸಚಿವರ ಭರವಸೆ ಒಪ್ಪದ ಕಾರ್ಯಕರ್ತರು ಕನಿಷ್ಠ 15 ಸಾವಿರ ರೂ. ಗೌರವಧನ ನೀಡುವಂತೆ ಪಟ್ಟು ಹಿಡಿದಿದ್ದಾರೆ. 

ಆಶಾ ಕಾರ್ಯಕರ್ತೆಯರ ಬೇಡಿಕೆಗಳು

1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು 15,000 ಮಾಸಿಕ ಗೌರವಧನ ನೀಡಬೇಕು.

2. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ 2 ಸಾವಿರ ರೂಪಾಯಿ ಗೌರವಧನ ಹೆಚ್ಚಿಸಬೇಕು

3. ಆಶಾ ಕಾರ್ಯಕರ್ತೆಯರು ಸ್ಮಾರ್ಟ್ ಫೋನ್ ಬಳಕೆ ಬಗ್ಗೆ ಹೊರಡಿಸಿದ ಅಧಿಕೃತ ಜ್ಞಾಪನಾ ಪತ್ರ ಕೂಡಲೇ ಹಿಂತೆಗೆದುಕೊಳ್ಳಬೇಕು.

4. ಅಧಿಕೃತವಾಗಿ ಆಶಾಗಳದಲ್ಲದ ಕೆಲಸವನ್ನು ಮಾಡಲು ಹೇಳಿರುವ ಆದೇಶ ವಾಪಸ್‌ ಪಡೆಯಬೇಕು.

5. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ, ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ, ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.

6. ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ 5 ಲಕ್ಷ ರೂ.ಗೆ ಹೆಚ್ಚಿಸುವುದು.

7. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರೊಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು.

8. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಆನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.

9. ಎಲ್ಲ ಆಶಾ ಕಾರ್ಯಕರ್ತೆಯರ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಯೆ ಇದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು.

10. ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್ ಐ ಸೌಲಭ್ಯ ಒದಗಿಸಬೇಕು.

Tags:    

Similar News