ಮೇಕೆದಾಟು | ಕನ್ನಡಿಗರ ಹಿತಾಸಕ್ತಿ ಬಲಿಕೊಡುತ್ತೀರಾ? ಡಿಕೆಶಿ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ʼʼಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆʼʼ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರತಿಪಕ್ಷ ನಾಯಕ ಆರ್‌ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Update: 2024-03-21 10:12 GMT

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ (INDIA ) ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕ ಮೇಕೆದಾಟು ಅಣೆಕಟ್ಟು ಯೋಜನೆ ಜಾರಿ ಮಾಡುವುದಿಲ್ಲ ಎಂದು ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಅವರು, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅಶೋಕ್, ವಿಪಕ್ಷ ನಾಯಕರ ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಪೋಸ್ಟ್‌ನಲ್ಲಿ, "ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಇಂಡಿಯಾ ಮೈತ್ರಿಯ ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಶಿವಕುಮಾರ್ ಅವರೇ, ಈಗ 'ನಮ್ಮ ನೀರು, ನಮ್ಮ ಹಕ್ಕು' ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ? ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ?" ಎಂದು ಪ್ರಶ್ನೆ ಮಾಡಿದ್ದಾರೆ.

ʼʼಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆʼʼ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಆರ್‌ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ತನ್ನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಮುಖವಾಗಿ ಮೇಕೆದಾಟು ಯೋಜನೆಗೆ ತಡೆ ಒಡ್ಡುವುದಾಗಿ ಘೋಷಣೆ ಮಾಡಲಾಗಿದೆ. ಆದರೆ ಇಂಡಿಯಾ ಒಕ್ಕೂಟದ ಭಾಗವಾಗಿರುವ ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದು, ಇಲ್ಲಿ ಮೇಕೆದಾಟು ಯೋಜನೆ ಜಾರಿಗಾಗಿ ವಿಧಾನಸಭಾ ಚುನಾವಣೆಗೂ ಮುನ್ನ ಬೃಹತ್ ರ್ಯಾಲಿಯನ್ನು ಕೈಗೊಂಡಿತ್ತು. ಆದರೆ ಇದೀಗ ಡಿಎಂಕೆ ಪಕ್ಷದ ಈ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.

Tags:    

Similar News