It's Raining in B'lore | ಬೆಂಗಳೂರಿನಲ್ಲಿ ಬಿಡುವಿಲ್ಲದ ಮಳೆ: ಜನಜೀವನ ಅಸ್ತವ್ಯಸ್ತ

ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ.

Update: 2024-10-15 07:58 GMT
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.

ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿಯಿಂದಲೇ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳವಾರವೂ ಮಳೆ ಮುಂದುವರಿದಿದ್ದು, ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ಳಂಬೆಳಿಗ್ಗೆಯೇ ಮಳೆ ಬಂದ ಪರಿಣಾಮ ಮಕ್ಕಳು ಮತ್ತು ಉದ್ಯೋಗಿಗಳು ತುಂತುರು ಮಳೆಯಲ್ಲಿಯೇ ನೆನೆದುಕೊಂಡು ಶಾಲೆಗಳಿಗೆ ಹಾಗೂ ಕೆಲಸಕ್ಕೆ ತೆರಳಬೇಕಾಯಿತು.

ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಓಕಳಿಪುರಂನ ಪ್ರಮುಖ ರೈಲ್ವೆ ಕೆಳಸೇತುವೆ ಸೇರಿದಂತೆ ಹಲವು ಅಂಡರ್‌ಪಾಸ್‌ಗಳು ಜಲಾವೃತಗೊಂಡಿದ್ದು, ಚಾಲಕರಿಗೆ ತೀವ್ರ ತೊಂದರೆಯಾಗಿದೆ. ಟ್ರಾಫಿಕ್ ಜಾಮ್‌ನಿಂದ ಯಶವಂತಪುರ, ಪೀಣ್ಯ 8ನೇ ಮೈಲಿ, ಗೊರಗುಂಟೆಪಾಳ್ಯ ಮುಂತಾದ ಪ್ರದೇಶಗಳಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ಪರದಾಡುವಂತಾಯಿತು.

ಬೆಂಗಳೂರಿನ ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್​, ಕಾರ್ಪೊರೇಷನ್​ ಸರ್ಕಲ್​, ಶಾಂತಿನಗರ, ಲಾಲ್ ಬಾಗ್, ಜಯನಗರ, ಸೌತ್ ಎಂಡ್ ಸರ್ಕಲ್, ಬಸವನಗುಡಿ, ಶ್ರೀನಗರ, ಹನುಮಂತನಗರ, ಗಿರಿನಗರ, ಚಾಮರಾಜಪೇಟೆ, ಬನಶಂಕರಿ, ಪದ್ಮನಾಭನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್​ಮಂಡ್​ ಸರ್ಕಲ್​, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ಆರ್.ಆರ್.ನಗರ, ಉತ್ತರಹಳ್ಳಿ, ದಾಸರಹಳ್ಳಿ, ರಾಜಾಜಿನಗರ, ವಿಧಾನಸೌಧ, ಕಬ್ಬನ್ ಪಾರ್ಕ್, ಶಿವಾಜಿನಗರ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆ ಸುರಿದಿದೆ.

ಭಾರಿ ಮಳೆಯ ಪರಿಣಾಮ HMT ಲೇಔಟ್ ನಲ್ಲಿ ಬೃಹತ್ ಮರ ಧರೆಗುರುಳಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 

ವಾಯುಭಾರ ಕುಸಿತ ತಂದ ಮಳೆ

ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರು ನಗರದಲ್ಲಿ ಮಂಗಳವಾರ ಬೆಳಿಗ್ಗೆ 8.30 ರ ಹೊತ್ತಿಗೆ ಒಟ್ಟು 16.2 ಮಿಮೀ ಮಳೆ ದಾಖಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕ್ರಮವಾಗಿ 10.5 ಮಿಮೀ ಮತ್ತು 8.6 ಮಿಮೀ ಮಳೆ ದಾಖಲಾಗಿದೆ. ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜೊತೆಗೆ ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಕೆಲವು ದಿನಗಳವರೆಗೆ ಬೆಂಗಳೂರಿನಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 

ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಭಾಗದಲ್ಲಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಮತ್ತು ಕೊಡಗಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಹೆಚ್ಚುವರಿಯಾಗಿ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ, ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

Tags:    

Similar News