Bangalore Stampede | ಸಿಎಂ ಮನೆಗೆ ಮುತ್ತಿಗೆ ಯತ್ನ; ವಿಜಯೇಂದ್ರ, ಅಶೋಕ್ ಸೇರಿ ಬಿಜೆಪಿ ನಾಯಕರು ವಶಕ್ಕೆ
ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಇದೇ ವೇಳೆ ವಾಗ್ದಾಳಿ ನಡೆಸಿದ್ದಾರೆ.;
ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು
ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಯ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಹಲವರನ್ನು ಪೊಲೀಸರು ಬಂಧಿಸಿದರು.
ಪ್ರತಿಭಟನೆಯಲ್ಲಿ ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಹೆಚ್. ಪಾಟೀಲ್, ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ. ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಭೈರತಿ ಬಸವರಾಜ್, ಕೆ. ಗೋಪಾಲಯ್ಯ, ಎಲ್. ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಎಸ್. ಮುನಿರಾಜು, ಎಂ. ಕೃಷ್ಣಪ್ಪ, ಸಿ.ಕೆ. ರಾಮಮೂರ್ತಿ, ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಕೇಶವ್ ಪ್ರಸಾದ್, ಭಾರತಿ ಶೆಟ್ಟಿ ಇತರರು ಭಾಗವಹಿಸಿ, ಸಿಎಂ ಹಾಗೂ ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು
“ಸರ್ಕಾರದ ಮೇಲೆ ನಂಬಿಕೆ ಇಲ್ಲ”
ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರತಿಭಟನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಸತ್ತಿರುವ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತಪಟ್ಟಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಿದೆ. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದರು.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರ ದಂಡು
ಮೂರು ದಿನದ ಅಧಿವೇಶನ ಕರೆಯಲು ಆಗ್ರಹ
ಬೆಂಗಳೂರು ಕಾಲ್ತುಳಿತ ಘಟನೆಗೆ ಸಂಬಂಧಿಸಿ ಚರ್ಚೆ ನಡೆಸಲು ಮೂರು ದಿನದ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಎಂದು ವ್ಯಂಗ್ಯವಾಡಿದ್ದಾರೆ.