Bangalore Stampede | ಬಿಜೆಪಿಯಿಂದ ಬೃಹತ್​ ಪ್ರತಿಭಟನೆ, ಬೆಂಗಳೂರು ಕಾಲ್ತುಳಿತಕ್ಕೆ ಸರ್ಕಾರವೇ ನೇರ ಹೊಣೆ ಆರೋಪ

ಸರ್ಕಾರದ ಭದ್ರತಾ ವೈಫಲ್ಯದಿಂದ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ಅಮಾಯಕರು ಮೃತಪಟ್ಟಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ.;

Update: 2025-06-08 13:22 GMT

ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ಘಟನೆಯ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರಿನ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರದ ಭದ್ರತಾ ವೈಫಲ್ಯದಿಂದ 11 ಮಂದಿ ಅಮಾಯಕರು ಮೃತಪಟ್ಟಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ, ಸಿ.ಟಿ.ರವಿ ಸೇರಿ ಇತರರು ಭಾಗವಹಿಸಿದ್ದರು.

ಸರ್ಕಾರದಿಂದ ಕಾನೂನು ದುರ್ಬಳಕೆ

ಪ್ರತಿಭಟನೆಯ ಸಾರಥ್ಯ ವಹಿಸಿ ಮಾತನಾಡಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಅವರು, ಕಾಲ್ತುಳಿತದ ಘಟನೆಗೂ ಮುನ್ನ ಪೊಲೀಸರು ನೀಡಿದ್ದ ಸೂಚನೆಗಳನ್ನು ಸರ್ಕಾರ ಉಲ್ಲಂಘಿಸಿದೆ. ಈ ಮೂಲಕ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಧ್ಯೆ ತಿಕ್ಕಾಟ ‌ಇಲ್ಲದಿದ್ದರೆ ವಿದ್ಯಾರ್ಥಿಗಳು ಸಾಯುತ್ತಿರಲಿಲ್ಲ. ಮಧ್ಯಾಹ್ನವೇ ಮೊದಲ ಸಾವು ಸಂಭವಿಸಿದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗ ಎಂಟು ಮಂದಿ ಮೃತಪಟ್ಟಿದ್ದರು. ಆದರೂ, ಸರ್ಕಾರ ಕಾರ್ಯಕ್ರಮ ಮುಂದುವರಿಸಿತು. ಸಿಎಂ ಹಾಗೂ ಡಿಸಿಎಂ ಅವರು ಕಟುಕರು, ಕಲ್ಲಿನ ಹೃದಯದವರು ಎಂದು ವಾಗ್ದಾಳಿ ನಡೆಸಿದ್ದಾರೆ. 

ಬಂದೋಬಸ್ತ್‌ಗೆ ಸಿಬ್ಬಂದಿ ಕೊರತೆ ಇರುವುದಾಗಿ ವಿಧಾನಸೌಧದ ಪೊಲೀಸರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದರೂ ಆತುರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ ಸಭಾಧ್ಯಕ್ಷರು ಆಗ ಕಾನೂನು ಪುಸ್ತಕ ತೋರಿಸಿದ್ದರು. ಈಗ ಸರ್ಕಾರವೇ ಕಾನೂನು ಉಲ್ಲಂಘಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಇಲಾಖೆ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಪೊಲೀಸರು ಸೂಚಿಸಿದ್ದರು. ಆದರೆ, ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸಿಸಿಟಿವಿ ಕ್ಯಾಮೆರಾ ಬೇಕೆಂದು ಹೇಳಿದ್ದರೂ ಪಾಲಿಸಿಲ್ಲ. ಡ್ರೋನ್ ಗೆ ಅವಕಾಶ ಇಲ್ಲ ಎಂದು ಹೇಳಲಾಗಿದೆ. ಈ ಎಲ್ಲ ಸೂಚನೆಗಳನ್ನು ಸರ್ಕಾರ ಹರಿದು ಬಿಸಾಡಿದೆ. ವೇದಿಕೆಯಲ್ಲಿ 20-30 ಜನರು ಮಾತ್ರ ಇರಬೇಕು ಎಂಬ ಸೂಚನೆಯನ್ನೂ ಉಲ್ಲಂಘಿಸಿದೆ. ವೇದಿಕೆ ಮೇಲೆ 11 ಆಟಗಾರರು ಸೇರಿ ಒಟ್ಟು 200 ಜನರು ಇದ್ದರು. ಇದು ಸರ್ಕಾರಿ ಕಾರ್ಯಕ್ರಮ ಎಂದು ಆದೇಶ ಪತ್ರದಲ್ಲಿದ್ದರೂ, ಸಿಎಂ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ಅಲ್ಲ ಎಂದಿದ್ದಾರೆ ಎಂದು ದೂರಿದ್ದಾರೆ.

ವಿಶೇಷ ಅಧಿವೇಶನ ಕರೆಯಿರಿ

ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದಕ್ಕಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಮೂರು ಸಂಸ್ಥೆಗಳಿಂದ ತನಿಖೆ ನಡೆಸಲಾಗುತ್ತಿದೆ.  ಇದರಲ್ಲಿ ಯಾವ ತನಿಖೆ ನಿಜ ಎಂದು ಗೊತ್ತಾಗಿಲ್ಲ. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಈ ಕುರಿತು ನಾವೆಲ್ಲರೂ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸರ್ಕಾರ ಪಾಪರ್ ಆಗಿಲ್ಲ ಎಂದಾದರೆ 1 ಕೋಟಿ ರೂ. ಪರಿಹಾರ ನೀಡಲಿ. ನಾವೆಲ್ಲರೂ ಒಂದು ತಿಂಗಳ ಸಂಬಳವನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

ಕಪ್ ಗೆಲ್ಲುವುದು ಹೊಸ ಸಂಗತಿಯಲ್ಲ. ಪ್ರತಿ ರಾಜ್ಯಗಳ ತಂಡ ಕಪ್ ಗೆದ್ದಾಗಲೂ ಈ ರೀತಿಯ ಘಟನೆ ನಡೆದಿಲ್ಲ‌. ಯಾವುದೇ ರಾಜ್ಯದಲ್ಲಿ ಮುಖ್ಯಮಂತ್ರಿಗಳು ಹೋಗಿ ಪ್ರಚಾರ ಪಡೆದಿಲ್ಲ ಎಂದಿದ್ದಾರೆ.

Tags:    

Similar News