Bangalore Stampede | ಕಾಲ್ತುಳಿತ ದುರಂತಕ್ಕೆ ಪೊಲೀಸ್ ಆಯುಕ್ತರ ತಲೆದಂಡ; ಸೀಮಂತ್‌ಕುಮಾರ್ ಸಿಂಗ್ ಹೊಸ ಆಯುಕ್ತ
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೂಕ್ತ ಬಂದೋಬಸ್ತ್ ಕಲ್ಪಿಸದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಗೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕೇಂದ್ರ ವಲಯ ಡಿಸಿಪಿ, ಎಸಿಪಿ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.;
ದಯಾನಂದ್ ಹಾಗೂ ಸೀಮಂತ್ ಕುಮಾರ್ ಸಿಂಗ್
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದೆ. ಬೆಂಗಳೂರು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ಆಯುಕ್ತರನ್ನು ಘಟನೆಯೊಂದಕ್ಕೆ ಹೊಣೆಯಾಗಿಸಿ ಅಮಾನತು ಮಾಡಲಾಗಿದೆ. ಇದೇ ವೇಳೆ ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೂಕ್ತ ಬಂದೋಬಸ್ತ್ ಕಲ್ಪಿಸದ ಹಿನ್ನೆಲೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಗೆ ಹೊಣೆಯಾಗಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕೇಂದ್ರ ವಲಯ ಡಿಸಿಪಿ ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ನ್ಯಾಯಾಂಗ ತನಿಖೆಗೆ ಆದೇಶ
ಇನ್ನು ಕಾಲ್ತುಳಿತ ದುರಂತದ ಕುರಿತು ಸಿಐಡಿ ತನಿಖೆ ಜೊತೆಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೂ ಸರ್ಕಾರ ಆದೇಶಿಸಿದೆ. ಗುರುವಾರ ನಡೆದ ಸಚಿವ ಸಂಪುಟದಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.
ಹಲವರ ಬಂಧನಕ್ಕೆ ಸಿಎಂ ಸೂಚನೆ
ಆರ್‌ಸಿಬಿ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರನ್ನು ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕ, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನನ್ನನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದ ಜೊತೆ ಸರ್ಕಾರ ಇರಲಿದೆ ಎಂದು ಹೇಳಿದರು.
ಈಗಾಗಲೇ ಆದೇಶ ನೀಡಿರುವಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ಇವೆಂಟ್ ಸಂಸ್ಥೆಯ ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮದ ಬಗ್ಗೆ ದ ಫೆಡರಲ್ ಕರ್ನಾಟಕದ ವಿಶ್ಲೇಷಣೆ ಬಗ್ಗೆ ಈ ಲಿಂಕ್ ಕ್ಲಿಕ್ ಮಾಡಿ.
ಆರ್‌ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತ ದುರಂತವು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಪ್ರತಿಪಕ್ಷಗಳು ಕೂಡ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದವು.
ಕಾಂಗ್ರೆಸ್ ಹೈಕಮಾಂಡ್ ಕೂಡ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತ್ತು.