Bangalore Stampede | ಆರ್‌ಸಿಬಿ ಸಂಭ್ರಮದಲ್ಲಿ ಕಾಲ್ತುಳಿತ; ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ‌ ದಾಖಲಿಸಿಕೊಂಡಿದೆ. ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ನಿಗದಿಪಡಿಸಿದ್ದು, ಪ್ರಕರಣವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.;

Update: 2025-06-05 06:53 GMT

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಕ್ರಿಕೆಟ್‌ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್‌ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಜಮಾಯಿಸಿದ್ದ ಲಕ್ಷಾಂತರ ಕ್ರೀಡಾಭಿಮಾನಿಗಳ ನಡುವೆ ಕಾಲ್ತುಳಿತ ಸಂಭವಿಸಿ ಹಲವರ ಜೀವಹಾನಿಯಾಗಿದೆ. ಈ ಘಟನೆ ಕುರಿತು ಕೂಡಲೇ ವರದಿ ಸಲ್ಲಿಸುವಂತೆ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮಧ್ಯಾಹ್ನ 2.30 ಕ್ಕೆ ನಿಗದಿಪಡಿಸಿದೆ. ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದ್ದು, ಪ್ರಕರಣವನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. 

ಬುಧವಾರ ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತ ದಿಗ್ಬ್ರಮೆ ಮೂಡಿಸಿದೆ. ಸರ್ಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಕುರಿತು ಸಮಗ್ರ ಮಾಹಿತಿ ನೀಡಬೇಕು ಎಂದು ಹೈಕೋರ್ಟ್‌ ಸೂಚನೆ ನೀಡಿದೆ. ಸರ್ಕಾರದ ಅಡ್ವೊಕೇಟ್‌ ಜನರಲ್‌ ಶಶಿಕಿರಣ್ ಶೆಟ್ಟಿ ಮಾತನಾಡಿ, ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ಘಟನೆಯ ಮಾಹಿತಿ, ಸರ್ಕಾರದ ಕೈಗೊಂಡಿದ್ದ ಭದ್ರತಾ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ದುರಂತದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.  ಈ ಕುರಿತ ಎಲ್ಲಾ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಆಯುಕ್ತ ಭೇಟಿ

ಕಾಲ್ತುಳಿತ ಸಂಭವಿಸಿ ಒಂದು ದಿನದ ನಂತರ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಪರಿಶೀಲಿಸಿದರು. 

ಕ್ರೀಡಾಂಗಣದ ಗೇಟ್ ಸಂಖ್ಯೆ 6, 7, 21 ರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಈ ಸ್ಥಳಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು, ಪರಿಶೀಲನೆ ನಡೆಸಿದರು.

Tags:    

Similar News