ಮುಜರಾಯಿ ಇಲಾಖೆ ದೇಗುಲಗಳಲ್ಲಿ ಇಂದಿನಿಂದ ಪ್ಲಾಸ್ಟಿಕ್‌ ಬಳಕೆ ನಿಷೇಧ; ರಾಮಲಿಂಗಾ ರೆಡ್ಡಿ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ಬಳಸಿದರೆ ದಂಡ ವಿಧಿಸಲು ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.;

Update: 2025-08-15 09:43 GMT

ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಎಲ್ಲ ದೇವಾಲಯಗಳಲ್ಲಿ ಇಂದಿನಿಂದ (ಶುಕ್ರವಾರ) ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ರಾಮನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ದೇವಸ್ಥಾನ ಆವರಣ, ಒಳಭಾಗದಲ್ಲಿ ಪ್ಲಾಸ್ಟಿಕ್ ಬಳಕೆಗೆ ಇಂದಿನಿಂದ ನಿಷೇಧ ಹೇರಲಾಗಿದೆ. ದೇಗುಲದ ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆ ನಿರ್ಬಂಧಿಸುವ ಕುರಿತು ಜಿಲ್ಲಾಡಳಿತಗಳು ನಿರ್ಧರಿಸಲಿವೆ. ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರುವ ಕುರಿತು ಗುರುವಾರ ವಿಧಾನಪರಿಷತ್ ಕಲಾಪದಲ್ಲಿ ರಾಮಲಿಂಗಾ ರೆಡ್ಡಿ ಅವರು ಮಾಹಿತಿ ನೀಡಿದ್ದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ನಿಯಮ ಉಲ್ಲಂಘಿಸಿ ಪ್ಲಾಸ್ಟಿಕ್ ಬಳಸಿದರೆ ದಂಡ ವಿಧಿಸಲು ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದರು.

ರಾಮನಗರ ದೇಗುಲಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

ಬೆಂಗಳೂರು ದಕ್ಷಿಣ ಜಿಲ್ಲೆ(ರಾಮನಗರ) ವ್ಯಾಪ್ತಿಯಲ್ಲಿರುವ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದೇಗುಲಗಳ ಒಳಾಂಗಣದಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಪ್ಲಾಸ್ಟಿಕ್ ಬಿಂದಿಗೆ, ಬಕೆಟ್, ಪ್ಲಾಸ್ಟಿಕ್ ಜಗ್, ಪ್ಲಾಸ್ಟಿಕ್ ಲಕೋಟೆ ಹಾಗೂ ಬಾಟಲಿ ಬಳದಂತೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕನ್ನಡದಲ್ಲಿ ಶ್ಲೋಕ; ಪರಿಶೀಲನೆ

ಮುಜರಾಯಿ ಇಲಾಖೆ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕ ಹೇಳುವಂತೆ ಸೂಚಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಈ ಸಂಬಂಧ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ್ದ ಸಚಿವರು, ಕನ್ನಡದ ಶ್ಲೋಕಗಳನ್ನು ಅಭ್ಯಾಸ ಮಾಡಲು ಸೂಚನೆ ಕೊಡುತ್ತೇವೆ ಎಂದಿದ್ದರು.

Tags:    

Similar News