ಬೆಂಗಳೂರಿನಲ್ಲಿ ಬರ್ಬರ ಕೃತ್ಯ: ಬಾಲಕಿ ಅತ್ಯಾಚಾರಗೈದು ಕೊಲೆ
ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದೆ.;
ಸಾಂದರ್ಭಿಕ ಚಿತ್ರ
ಬೆಂಗಳೂರು ಹೊರವಲಯದ ತಾವರೆಕೆರೆ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಬೆಚ್ಚಿಬೀಳಿಸುವ ಘಟನೆ ನಡೆದಿದೆ. 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಅತ್ಯಾಚಾರ ಎಸಗಿರುವ ಬಗ್ಗೆ ಬಲವಾದ ಶಂಕೆ ವ್ಯಕ್ತವಾಗಿದೆ.
ಕೊಪ್ಪಳ ಮೂಲದ ದಂಪತಿ ಗಾರೆ ಕೆಲಸ ಮಾಡಿಕೊಂಡು ಕಳೆದ 15 ವರ್ಷಗಳಿಂದ ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ವಾಸವಾಗಿದ್ದರು. ಘಟನೆ ನಡೆದಾಗ ಬಾಲಕಿಯ ತಂದೆ-ತಾಯಿ ಕೆಲಸಕ್ಕೆ ಹೋಗಿದ್ದು, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು ಎನ್ನಲಾಗಿದೆ. ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ, ಶಾಲೆಗೆ ಹೋಗದೆ ಮನೆಯಲ್ಲಿದ್ದ ಬಾಲಕಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಮಧ್ಯಾಹ್ನದ ವೇಳೆಗೆ ಬಾಲಕಿ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ದುಷ್ಕರ್ಮಿಗಳು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿ ಪರಾರಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಪೊಲೀಸರು ಆರೋಪಿಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.