7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಗುರಿ:ಸಚಿವ ಶಿವಾನಂದ ಪಾಟೀಲ್
ವಿಧಾನಸಭೆಯಲ್ಲಿ ಬುಧವಾರ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ದರ ಕುಸಿತ ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.
ರಾಜ್ಯದ ರೈತರ ಹಿತರಕ್ಷಣೆಗಾಗಿ ಎಥೆನಾಲ್ ಹಾಗೂ ಡಿಸ್ಟಲರಿ ಕಾರ್ಖಾನೆಗಳ ಮೂಲಕ ಬೆಂಬಲ ಬೆಲೆಯಡಿ ಒಟ್ಟು 7 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಸರ್ಕಾರ ಗುರಿ ನಿಗದಿಪಡಿಸಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ ಶಾಸಕ ಎನ್.ಹೆಚ್. ಕೋನರೆಡ್ಡಿ ಹಾಗೂ ಬಸವರಾಜ ಶಿವಗಂಗಾ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ದರ ಕುಸಿತ ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಸರ್ಕಾರದ ಮಧ್ಯಪ್ರವೇಶದಿಂದಾಗಿ ಈ ಹಿಂದೆ ಪ್ರತಿ ಟನ್‌ಗೆ 1,600 ರೂಪಾಯಿ ಇದ್ದ ದರವು ಇದೀಗ 2,170 ರೂಪಾಯಿಗಳಿಗೆ ಏರಿಕೆಯಾಗಿದೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಕ್ಕಿಂತ ರಾಜ್ಯದಲ್ಲಿ ಮಾರುಕಟ್ಟೆ ದರ ಸುಧಾರಿಸಿದೆ ಎಂದು ಅವರು ಮಾಹಿತಿ ನೀಡಿದರು.
ರೈತರಿಂದ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಖರೀದಿಸಲು ಕೆ.ಎಂ.ಎಫ್‌ಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಖರೀದಿ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ನಿರ್ದೇಶನ ನೀಡಲಾಗುವುದು. ಮಯನ್ಮಾರ್ ದೇಶದಿಂದ ಮೆಕ್ಕೆಜೋಳ ಆಮದು ಮಾಡಿಕೊಳ್ಳುತ್ತಿರುವುದು ಮಾರುಕಟ್ಟೆ ದರ ವ್ಯತ್ಯಾಸಕ್ಕೆ ಪ್ರಮುಖ ಕಾರಣವಾಗಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ್ದ ಶಾಸಕ ಕೋನರೆಡ್ಡಿ ಅವರು, ಧಾರವಾಡ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಕೆ.ಎಂ.ಎಫ್ ಖರೀದಿಯ ಗುರಿಯನ್ನು ಹೆಚ್ಚಿಸದಿದ್ದರೆ ರೈತರು ಖಾಸಗಿ ಮಾರುಕಟ್ಟೆಯಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಯ ಮೆಕ್ಕೆಜೋಳ ಬೆಳೆಗಾರರ ಪರವಾಗಿ ಶಾಸಕ ಬಸವರಾಜ ಶಿವಗಂಗಾ ಅವರು ಸರ್ಕಾರದ ನೆರವಿಗಾಗಿ ಮನವಿ ಮಾಡಿದರು.