ಬೇಲೆಕೇರಿ ಪ್ರಕರಣ | ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ
'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.;
ಬೇಲೆಕೇರಿ ಬಂದರಿನಲ್ಲಿ ಸಂಗ್ರಹಿಸಿ ಇರಿಸಲಾಗಿದ್ದ ಕಬ್ಬಿಣದ ಅದಿರು ಕದ್ದು, ರಫ್ತು ಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ಮತ್ತು ದಂಡದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಉದ್ಯಮಿಗಳಾದ ಸ್ವಸ್ತಿಕ್ ನಾಗರಾಜ್, ಕೆ.ವಿ.ಎನ್.ಗೋವಿಂದರಾಜ್ ಮತ್ತು ಚೇತನ್ ಶಾ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ನಾಲ್ವರೂ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಮತ್ತು ಸಿಬಿಐ ಪರ ವಕೀಲ ಪಿ.ಪ್ರಸನ್ನ ಕುಮಾರ್ ಹಾಜರಿದ್ದರು. ಕೆಲಕಾಲ ಇಬ್ಬರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿತು.