ಟೆಕ್ಕಿ ಆತ್ಮಹತ್ಯೆ ಪ್ರಕರಣ | ನಿಖಿತಾ ಸಿಂಘಾನಿಯಾ ಜಾಮೀನಿಗೆ ಬೆಂಗಳೂರು ಪೊಲೀಸ್ ಆಕ್ಷೇಪಣೆ

ಜೌನಪುರದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ. ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಮಾಹಿತಿ ಕಲೆ ಹಾಕಿದ್ದು, ಕೌಟುಂಬಿಕ ನ್ಯಾಯಾಲಯಲ್ಲಿ ಪ್ರಕರಣಗಳ ವಿವರ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Update: 2024-12-14 13:00 GMT

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಕುಟುಂಬ ಸದಸ್ಯರು ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಡಿ.9 ರಂದು ಬೆಂಗಳೂರಿನ ಮಾರತ್ತಹಳ್ಳಿ ಸಮೀಪ ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಖಾಸಗಿ ಕಂಪನಿ ಉದ್ಯೋಗಿ ಅತುಲ್ ಸುಭಾಷ್ 24 ಪುಟಗಳ ಡೆತ್‌ನೋಟ್‌‌ ಬರೆದಿಟ್ಟು, 81 ನಿಮಿಷಗಳ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೆತ್‌ನೋಟ್‌ನಲ್ಲಿ ಪತ್ನಿ ನಿಖಿತಾ ಹಾಗೂ ಆಕೆಯ ಕುಟುಂಬ ಸದಸ್ಯರ ಕಿರುಕುಳದ ಬಗ್ಗೆ ಪ್ರಸ್ತಾಪಿಸಿದ್ದರು. ಈ ಕುರಿತು ಅತುಲ್ ಸಹೋದರ ಬಿಕಾಸ್ ಕುಮಾರ್ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ನಿಖಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ, ಸೋದರ ಅನುರಾಗ್ ಸಿಂಘಾನಿಯಾ ಹಾಗೂ ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ವಿರುದ್ಧ ದೂರು ದಾಖಲಿಸಿದ್ದರು.

ನಿಖಿತಾ ತವರೂರು ಉತ್ತರಪ್ರದೇಶದ ಜೌನಪುರಕ್ಕೆ ಗುರುವಾರ ಮುಂಜಾನೆ ಎರಡು ತಂಡಗಳಲ್ಲಿ ತೆರಳಿದ್ದ ಮಾರತ್ತಹಳ್ಳಿ ಠಾಣೆ ಪೊಲೀಸರು ನಿಖಿತಾ ಮನೆಗೆ ಸಮನ್ಸ್ ಅಂಟಿಸಿ, ಮೂರು ದಿನಗಳಲ್ಲಿ ತನಿಖಾಧಿಕಾರಿ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನಡುವೆ, ನಿಖಿತಾ ಸಿಂಘಾನಿಯಾ ಹಾಗೂ ಆಕೆಯ ಕುಟುಂಬ ಸದಸ್ಯರು ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣ ಕುರಿತಂತೆ ʼದ ಫೆಡರಲ್ ಕರ್ನಾಟಕʼದೊಂದಿಗೆ ಮಾತನಾಡಿದ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿ ಶಿವಕುಮಾರ್ ಗುಣಾರೆ, ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲಾಗುವುದು. ಸಮನ್ಸ್ ಅವಧಿ ಭಾನುವಾರಕ್ಕೆ ಮುಕ್ತಾಯವಾಗಲಿದೆ. ಅಷ್ಟರಲ್ಲಿ ವಿಚಾರಣೆಗೆ ಹಾಜರಾಗದಿದ್ದರೆ ಅಲ್ಲಿನ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಆರೋಪಿಗಳ ಪತ್ತೆ ಕಾರ್ಯ ಚುರುಕುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಉತ್ತರಪ್ರದೇಶದ ಜೌನಪುರದಲ್ಲಿ ಬೀಡುಬಿಟ್ಟಿರುವ ಬೆಂಗಳೂರು ಪೊಲೀಸರು ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ. ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಮಾಹಿತಿ ಕಲೆ ಹಾಕಿದ್ದು, ಕೌಟುಂಬಿಕ ನ್ಯಾಯಾಲಯಲ್ಲಿಯೂ ಘಟನೆ ಕುರಿತು ವಿವರಿಸಿ, ಪ್ರಕರಣಗಳ ವಿವರ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಆರೋಪಿಗಳ ವಿಚಾರಣೆ ಅಗತ್ಯವಾಗಿದೆ. ಹಾಗಾಗಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿವೆ.

Tags:    

Similar News