Actor Darshan Case | ದರ್ಶನ್ ಮತ್ತು ಸಹಚರರಿಗೆ ನೀಡಿದ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಲು ಮುಂದಾದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿರುವ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಹೇಳಿದ್ದಾರೆ;
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮಂಗಳವಾರ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿರುವ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠವು ದರ್ಶನ್, ಪವಿತ್ರಾ ಗೌಡ, ಮತ್ತು ಇತರ ಆರೋಪಿಗಳಾದ ಆರ್ ನಾಗರಾಜು, ಅನು ಕುಮಾರ್ ಅಲಿಯಾಸ್ ಅನು, ಲಕ್ಷ್ಮಣ್ ಎಂ, ಜಗದೀಶ್ ಅಲಿಯಾಸ್ ಜಗ್ಗ ಮತ್ತು ಪ್ರದೂಷ್ ಎಸ್ ರಾವ್ ಅವರಿಗೂ ಜಾಮೀನು ನೀಡಿದೆ.
ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕಾಗಿ ಕಳೆದ ಜೂನ್ 7ರಂದು ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್ ಮತ್ತು ಗ್ಯಾಂಗನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಸೇರಿದಂತೆ ಹದಿನೇಳು ಮಂದಿ ಕಳೆದ ಆರು ತಿಂಗಳಿನಿಂದ ವಿಚಾರಣಾಧೀನ ಕೈದಿಗಳಾಗಿ ಜೈಲಿನಲ್ಲಿದ್ದರು. ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆ ಸೇರಿದ್ದರು. ಇದೀಗ ದರ್ಶನ್‌ಗೂ ಜಾಮೀನು ಮಂಜೂರು ಆಗಿದ್ದು, ಜಾಮೀನು ಪ್ರಕ್ರಿಯೆಯನ್ನು ಮುಗಿಸಿಕೊಂಡು ದರ್ಶನ್ ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 6 ತಿಂಗಳಿಂದ ಪರಪ್ಪನ ಅಗ್ರಹಾರದಲ್ಲಿದ್ದ ಪವಿತ್ರಾ ಗೌಡ ಕೂಡ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿದ್ದಾರೆ.