ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಕಾರ್ಮಿಕ ಬಲಿ: ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ದುರಂತ
ಯಲಹಂಕದಲ್ಲಿ ಎಂಬೆಸ್ಸಿ ಸಮೂಹಕ್ಕೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಸೋಮವಾರ ಸಂಜೆ ಸುರಿದ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿದ್ದ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರ ಪರಿಣಾಮ ಈ ಘಟನೆ ಸಂಭವಿಸಿದೆ.;
ಸಾಂದರ್ಭಿಕ ಚಿತ್ರ
ನಗರದಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಕೂಲಿ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದಿದ್ದು ಹೇಗೆ?
ಯಲಹಂಕದಲ್ಲಿ ಎಂಬೆಸ್ಸಿ ಸಮೂಹಕ್ಕೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಸೋಮವಾರ ಸಂಜೆ ಸುರಿದ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿದ್ದ ಗುಂಡಿಯಲ್ಲಿ ನೀರು ತುಂಬಿಕೊಂಡಿದೆ. ಇದರಿಂದ ಸುತ್ತಮುತ್ತಲಿನ ಮಣ್ಣು ಸಡಿಲಗೊಂಡು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಇತರ ಕಾರ್ಮಿಕರು ಮತ್ತು ಸ್ಥಳೀಯರು ಓರ್ವ ಕಾರ್ಮಿಕನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಆದರೆ, ಮತ್ತೊಬ್ಬ ಕಾರ್ಮಿಕ ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.