Mysore Muda Case| ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ: ಮೇ 7ಕ್ಕೆ ವಿಚಾರಣೆ ಮುಂದೂಡಿಕೆ
ಜಾರಿ ನಿರ್ದೇಶನಾಲಯ ಕೂಡಾ ತಕರಾರು ಅರ್ಜಿ ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ.;
ಮುಡಾ
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ ಪೊಲೀಸರ 'ಬಿ' ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ. ತನಿಖೆ ಮುಂದುವರಿಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾ. ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ.
ಜಾರಿ ನಿರ್ದೇಶನಾಲಯ ಕೂಡಾ ತಕರಾರು ಅರ್ಜಿ ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ ಎಂದು ಕೋರ್ಟ್ ಮೇ 7 ಕ್ಕೆ ವಿಚಾರಣೆ ಮುಂದೂಡಿದೆ.
ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯಲ್ಲಿ ಏನಿದೆ?
ದೂರುದಾರ ಸ್ನೇಹಮಯಿ ಕೃಷ್ಣ ಅವರು 39 ಪುಟಗಳ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. “ತನಿಖಾಧಿಕಾರಿ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿ ನನ್ನ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿ ಅಂತಿಮ ವರದಿ ಆಗಿರುವುದಿಲ್ಲ. ಆದರೂ ಬಿ ಅಂತಿಮ ವರದಿ ಸಲ್ಲಿಸಿದ್ದರೂ ಕೂಡ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆ ಮಾಡಬಹುದು ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯವು, “ಇಂಡಿಯಾ ಕಾರೆಟ್ ಪ್ರೈ.ಲಿ. ವಿರುದ್ಧ ಕರ್ನಾಟಕ ರಾಜ್ಯ” ಎಂಬ ಪ್ರಕರಣದ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ, ತೀರ್ಪಿನ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿನ ಅಂಶಗಳನ್ನು ಪರಿಗಣಿಸಿ, ಸೂಕ್ತ ಆದೇಶ ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ತಕರಾರು ಸಲ್ಲಿಸಿದ್ದರು.
“ತನಿಖಾಧಿಕಾರಿಯು 1 ರಿಂದ 4ನೇ ಆರೋಪಿಗಳ ವಿಚಾರದಲ್ಲಿ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕಾಗಿಯೂ ಲಭ್ಯವಿರುವ ಮತ್ತು ಮುಂದೆ ಲಭ್ಯವಾಗುವ ಸಾಕ್ಷ್ಯಾಧಾರಗಳ ಮೂಲಕ 1 ರಿಂದ 4ನೇ ಆರೋಪಿಗಳ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸಲು ಬೇಕಾದ ಮುಂದಿನ ಕಾನೂನು ಪ್ರಕ್ರಿಯೆ ನಡೆಸಲು ಅನುಮತಿ ನೀಡಬೇಕಾಗಿಯೂ, ಮಾನ್ಯ ನ್ಯಾಯಾಲಯಕ್ಕೆ ಸೂಕ್ತ ಮತ್ತು ನ್ಯಾಯ ಸಮ್ಮತ ಎಂದು ಕಂಡು ಬರುವ ಇತರೆ ಸೂಕ್ತ ಆದೇಶವನ್ನು ಮಾಡಬೇಕೇಂದು” ನ್ಯಾಯ ಪೀಠಕ್ಕೆ ಮನವಿ ಮಾಡಿದ್ದರು.
ಏನಿದು ಪ್ರಕರಣ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. 50:50 ಅನುಪಾತದಡಿ ನಿವೇಶನಗಳನ್ನು ಸರಿಯಾಗಿ ಹಂಚಿಕೆ ಮಾಡದೆ ಅಂದಾಜು 5,000 ಕೋಟಿ ರೂ.ನಷ್ಟು ಭಾರೀ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ.
ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಬಳಸಿಕೊಂಡಿತ್ತು. ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು. ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿತ್ತು. ನಂತರ ತನಗೆ ಪ್ರಾಧಿಕಾರ ನೀಡಿದ್ದ 14 ಸೈಟುಗಳನ್ನು ವಾಪಸ್ ನೀಡುವುದಾಗಿ ಪಾರ್ವತಿ ಸಿದ್ದರಾಮಯ್ಯ ಘೋಷಿಸಿದ್ದರು.