Bengaluru Stampede: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಗೊಳಿಸಿದ ಸಿಎಟಿ
Bengaluru Stampede:ನ್ಯಾಯಮೂರ್ತಿ ಬಿಕೆ ಶ್ರೀವಾಸ್ತವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ. ಅಲ್ಲದೆ, ವಿಕಾಸ್ ಕುಮಾರ್ ಅವರಿಗೆ ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.;
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ರದ್ದು ಮಾಡಿದೆ. ಈ ಘಟನೆ ಬಳಿಕ ಹಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.
ನ್ಯಾಯಮೂರ್ತಿ ಬಿಕೆ ಶ್ರೀವಾಸ್ತವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ. ಅಲ್ಲದೆ, ವಿಕಾಸ್ ಕುಮಾರ್ ಅವರಿಗೆ ಹಿಂದಿನ ಎಲ್ಲಾ ಭತ್ಯೆ ಮತ್ತು ಸೌಲಭ್ಯಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು ವಾದ ಮಂಡಿಸಿದ್ದರು. ಈ ತೀರ್ಪಿನ ನಂತರ, ಇದೇ ಪ್ರಕರಣದಲ್ಲಿ ಅಮಾನತುಗೊಂಡಿರುವ ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿದಂತೆ ಇತರ ಅಧಿಕಾರಿಗಳ ಅಮಾನತು ಆದೇಶಗಳ ಭವಿಷ್ಯ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿಯ ಸಾವು
ಕಳೆದ ಜೂನ್ 3ರಂದು ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಲಕ್ಷಾಂತರ ಅಭಿಮಾನಿಗಳು ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸಿದ್ದು, ಜನಸಂದಣಿಯ ನಿಯಂತ್ರಣವಿಲ್ಲದೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಈ ಘಟನೆಗೆ ಸಂಬಂಧಿಸಿ ರಾಜ್ಯ ಸರ್ಕಾರವು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.
ಅಮಾನತು ಆದೇಶವನ್ನು ಪ್ರಶ್ನಿಸಿ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಮೊರೆ ಹೋಗಿದ್ದರು. ನ್ಯಾಯಮಂಡಳಿಯು ಅವರ ಅರ್ಜಿಯ ವಿಚಾರಣೆ ನಡೆಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿವರಣೆ ಕೋರಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅಡ್ವೊಕೇಟ್ ಜನರಲ್ ಹೆಚ್ಚುವರಿ ಕಾಲಾವಕಾಶ ಕೇಳಿದ ಕಾರಣ ವಿಚಾರಣೆ ಮುಂದೂಡಲಾಗಿತ್ತು.
ಈ ಘಟನೆಯ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಸಿಐಡಿ ಅಧಿಕಾರಿಗಳು ಆರ್ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ, ಸುನಿಲ್ ಮ್ಯಾಥ್ಯೂ, ಕಿರಣ್, ಶಮಂತ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆದರೆ, ನ್ಯಾಯಾಲಯ ಬಂಧಿತರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲು ನಿರಾಕರಿಸಿ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಇದೀಗ ಸಿಎಟಿಯ ಈ ತೀರ್ಪು ರಾಜ್ಯ ಸರ್ಕಾರದ ಮುಂದಿನ ನಡೆಯ ಮೇಲೆ ಪರಿಣಾಮ ಬೀರಲಿದೆ.