ಬೆಂಗಳೂರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಜಿಬಿಎ ಅಧಿಕಾರಿಗಳ ಸಭೆ ನಡೆಸಿದ ಚುನಾವಣಾಧಿಕಾರಿ

ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ, ಪರಿಷ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಅಲ್ಲದೆ ಪಕ್ಷಗಳು ಕೇಳುವ ಮಾಹಿತಿ ಕೊಡುವಂತೆ ಸೂಚಿಸಲಾಯಿತು.

Update: 2025-09-26 15:59 GMT

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರಿನಲ್ಲಿ "ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2025" ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ಇಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಪರಿಷ್ಕರಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ದೋಷರಹಿತವಾಗಿ ನಡೆಸಲು ಸಹಕಾರ ಕೋರಿದರು.

ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ, ಪರಿಷ್ಕರಣೆಯ ಸಂಪೂರ್ಣ ಪ್ರಕ್ರಿಯೆಯ ಬಗ್ಗೆ ವಿವರವಾಗಿ ಚರ್ಚಿಸಲಾಯಿತು.

ಪರಿಷ್ಕರಣೆ ಮತ್ತು ನಿರ್ದೇಶನಗಳು

ಬೆಂಗಳೂರು ಜಿಲ್ಲೆಯಾದ್ಯಂತ ಒಟ್ಟು 8,972 ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯು ಹೊಸ ಮತದಾರರ ಸೇರ್ಪಡೆ, ಮೃತರ ಹೆಸರುಗಳ ತೆಗೆದುಹಾಕುವಿಕೆ, ಮತ್ತು ವಿಳಾಸ ಬದಲಾವಣೆಯಂತಹ ತಿದ್ದುಪಡಿಗಳನ್ನು ಒಳಗೊಂಡಿದೆ.

ಸಭೆಯಲ್ಲಿ ಮಾತನಾಡಿದ ಶ್ರೀ ಮಹೇಶ್ವರ್ ರಾವ್, ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ರಾಜಕೀಯ ಪಕ್ಷಗಳಿಂದ ಬರುವ ಯಾವುದೇ ದೂರುಗಳಿಗೆ ತಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಬೇಕು. ರಾಜಕೀಯ ಪಕ್ಷಗಳು ಕೇಳುವ ಮಾಹಿತಿಯನ್ನು ವಿಳಂಬ ಮಾಡದೆ, ಕೂಡಲೇ ಒದಗಿಸಬೇಕು. ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಲ್ಲಿ ನ್ಯೂನತೆಗಳು ಉಂಟಾಗಬಾರದು. ಅಧಿಕಾರಿಗಳು ಇದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಈ ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಸಹಾಯಕ ಆಯುಕ್ತರಾದ ಡಾ. ಬಿ. ಶರಣಪ್ಪ, ಹಾಗೂ ಕಾಂಗ್ರೆಸ್, ಬಿಜೆಪಿ, ಜೆಡಿ(ಎಸ್) ಸೇರಿದಂತೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು. ಈ ಪರಿಷ್ಕರಣಾ ಪ್ರಕ್ರಿಯೆಯು ಮುಂಬರುವ ಚುನಾವಣೆಗಳಿಗೆ ನಿಖರ ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. 

Tags:    

Similar News