ಭೋವಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ | ತನಿಖಾಧಿಕಾರಿ ಎ.ಡಿ.ನಾಗರಾಜ್ ಅಮಾನತು
ಭೋವಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಅವರು ಆದೇಶ ಹೊರಡಿಸಿದ್ದಾರೆ.;
ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂ. ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಹಣ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ಮಾಡಿತ್ತು. ಈ ವೇಳೆ ಎ.ಡಿ. ನಾಗರಾಜಪ್ಪ ಹಾಗೂ ಲೀಲಾವತಿ ಸೇರಿ ಹಲವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆ ವೇಳೆ ತನಿಖಾಧಿಕಾರಿ ನಾಗರಾಜಪ್ಪ ಅವರು ಆರೋಪಿಗಳಿಂದ ಹಣ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಭ್ರಷ್ಟಾಚಾರ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನು ಬಂಧಿಸಿದ್ದರು.