BJP Chargesheet | ಕರ್ನಾಟಕದಲ್ಲಿ ಕಾಂಗ್ರೆಸ್‌ನ ತುರ್ತು ಪರಿಸ್ಥಿತಿ?: ಬಿಜೆಪಿಯ ವಿರುದ್ಧ ಮಾನನಷ್ಟ ಕೇಸ್‌ಗೆ ಬಿಜೆಪಿ ತಿರುಗೇಟು

ಸರ್ಕಾರದ ವೈಫಲ್ಯಗಳ ಕುರಿತು ಆರೋಪಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ.;

Update: 2025-05-26 08:51 GMT

ರಾಜ್ಯ ಸರ್ಕಾರದ ಎರಡು ವರ್ಷಗಳ ಆಡಳಿತ ವೈಫಲ್ಯಗಳ ಆರೋಪಪಟ್ಟಿ ಬಿಡುಗಡೆ ಮಾಡಿರುವುದರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ಸಚಿವ ಪ್ರಲ್ಹಾದ್​ ಜೋಷಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಸರ್ಕಾರವು ವಿರೋಧ ಪಕ್ಷವನ್ನು ದಮನ ಮಾಡಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷಕ್ಕಿದೆ. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು, ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಅಂಟಿದೆ. ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತ ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಸರ್ಕಾರವು ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದೆ. ವಿಧಾನಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸರ್ವಾಧಿಕಾರಿ ವರ್ತನೆ ಪ್ರದರ್ಶಿಸಿತ್ತು.

ಇದೀಗ ಎರಡು ವರ್ಷದ ಸಾಧನೆ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ಹೊರಟಿದ್ದ ‘ಸಾಧನ ಸಮಾವೇಶ’ವನ್ನು ಪ್ರಶ್ನಿಸಿದ್ದಕ್ಕೆ ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿರುವುದು ಇದೇ ಮೊದಲು. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಪ್ರತಿಬಿಂಬಿಸುತ್ತಿದೆ. ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆ ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಬಿಜೆಪಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ. ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ. ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ. ವಿರೋಧ ಪಕ್ಷಗಳಿಗೂ ಇದೆ. ಇದನ್ನು ಶೀಘ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಎದುರು ನೋಡಲಿದೆ ಎಂದು ಎಚ್ಚರಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್​ ಜೋಷಿ ಅವರು ಕೂಡ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಎನ್ನುವ ಪ್ರಶ್ನೆ ಕಾಡುತ್ತಿದೆ ಎಂದು ಹೇಳಿದ್ದಾರೆ. ಸಂವಿಧಾನ, ಡಾ ಬಾಬಾ ಸಾಹೇಬರ ಕುರಿತು ಮಾತನಾಡುವ ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ. ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಎಂದು ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

ಸರ್ಕಾರದ ದುರಾಡಳಿತ, ಭ್ರಷ್ಟತೆ ಪ್ರಶ್ನಿಸಿದರೆ ನಿಮಗೆ ಏಕೆ ಭಯ?, ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥರನ್ನು ಬಂಧಿಸಲು ಪೊಲೀಸರನ್ನು ಕಳುಹಿಸಿರುವುದು ಯಾವ ಸಂದೇಶ ನೀಡುವುದಕ್ಕಾಗಿ?,  ಸಿಎಂ ಕುರ್ಚಿ ಉಳಿಸಿಕೊಳ್ಳಲು ಹೆಣಗಾಡುತ್ತಿರುವುದು ನಿಮ್ಮ ಕಾರ್ಯದ ಹಿಂದಿರುವ ನಡೆಯಾಗಿದೆ. ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಖಂಡಿಸಿದ್ದಾರೆ.  40 ಪರ್ಸೆಂಟ್‌ ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ ಬಿಜೆಪಿ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಗೊಡ್ಡು ಬೆದರಿಕೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಎಡವಟ್ಟುಗಳನ್ನು ಜನರಿಗೆ ತಲುಪಿಸುವ ನಮ್ಮ ಸಾಂವಿಧಾನಿಕ ದತ್ತ ಕರ್ತವ್ಯ ಎಗ್ಗಿಲ್ಲದೆ ಮುಂದುವರೆಯಲಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

Tags:    

Similar News