ರಸ್ತೆ ಗುಂಡಿಗಳಿಗೆ ಬಿಜೆಪಿಯೇ ಕಾರಣ, ಬೆಂಗಳೂರಿಗೆ ಕೇಂದ್ರದಿಂದ ನಯಾಪೈಸೆ ಅನುದಾನವಿಲ್ಲ
ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಗುರುವಾರ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, “ನಗರದ ರಸ್ತೆಗಳಲ್ಲಿ ಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆ ಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು.
ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ರಾಜ್ಯಕ್ಕೆ ಅನುದಾನ ನೀಡಿಲ್ಲ. ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಸೂಕ್ತ ಅನುದಾನ ಸಿಕ್ಕಿರಲಿಲ್ಲ. ಆದರೂ ನಾವು ಬೆಂಗಳೂರಿನ ಹಿತವನ್ನು ಕಾಪಾಡುತ್ತೇವೆ. ಬಿಜೆಪಿಗರು ಪ್ರತಿಭಟನೆ ಮಾಡಲಿ, ನಮ್ಮ ಕಾರ್ಯಕರ್ತರು ಬಿಜೆಪಿ ಆಡಳಿತದಲ್ಲಿರುವ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಪಾಲಿಕೆಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಬಗ್ಗೆ ಪ್ರತಿಭಟಿಸಲಿದ್ದಾರೆ ಎಂದು ತಿಳಿಸಿದರು.
ಉದ್ಯಮಿಗಳಿಗೆ ಟಾಂಗ್
ನಗರದ ರಸ್ತೆ ಗುಂಡಿಗಳ ಬಗ್ಗೆ ಟೀಕಿಸುವ ಮೊದಲು ನಮ್ಮ ಸ್ನೇಹಿತರಾದ ಉದ್ಯಮಿಗಳು ಕೂಡ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ಪರೋಕ್ಷವಾಗಿ ಬ್ಲಾಕ್ ಬಕ್‌ನ ರಾಜೇಶ್ ಯಬಾಜಿ, ಬಯೋಕಾನ್ ಸಂಸ್ಥೆಯ ಕಿರಣ್ ಮಜುಮ್ದಾರ್ ಶಾ ಹಾಗೂ ಉದ್ಯಮಿ ಮೋಹನ್ ದಾಸ್ ಪೈಗೆ ಟಾಂಗ್ ಕೊಟ್ಟರು.
ಭೈರಪ್ಪ ಅವರದ್ದು ನೇರ ನುಡಿ, ಗಟ್ಟಿ ವ್ಯಕ್ತಿತ್ವ
"1994ರಲ್ಲಿ ಕನಕಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗಿತ್ತು. ಆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಭೈರಪ್ಪನವರು ವಹಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ನನಗೆ ಅವರ ಪರಿಚಯವಾಗಿತ್ತು. ಅವರ ಮಾತು, ಬರವಣಿಗೆ ಸದಾ ನೇರನುಡಿಯಿಂದ ಕೂಡಿತ್ತು. ಅಂದು ಬನಶಂಕರಿಯಿಂದ ಮೆರವಣಿಗೆ ಮೂಲಕ ಅವರನ್ನು ಕರೆದೊಯ್ಯಲಾಗಿತ್ತು” ಎಂದು ನೆನಪಿಸಿಕೊಂಡರು.
ಅವರ ಕಾದಂಬರಿಗಳು ವಿದೇಶಿ ಭಾಷೆಗಳಿಗೆ ಭಾಷಾಂತರವಾಗಿದ್ದು, ಚಲನಚಿತ್ರಗಳಾಗಿಯೂ ಮೂಡಿಬಂದಿವೆ. ಭೈರಪ್ಪ ಅವರು ತಮ್ಮ ಬರವಣಿಗೆಯಲ್ಲಿ ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿದಿದ್ದಾರೆ. ಅವರಿಗೆ ಪದ್ಮಭೂಷಣ ಸೇರಿದಂತೆ ಹಲವು ರಾಷ್ಟ್ರ ಪ್ರಶಸ್ತಿಗಳು ಸಂದಿವೆ. ಅವರ ಸಿದ್ಧಾಂತ, ನಿಲುವು, ನಡೆ ಕೇವಲ ಸಾಹಿತ್ಯ ಲೋಕಕ್ಕೆ ಮಾತ್ರವಲ್ಲ ಸಮಾಜದ ಎಲ್ಲಾ ವರ್ಗಕ್ಕೆ ಮಾರ್ಗದರ್ಶನವಾಗಿದೆ ಎಂದರು.
ಮತ ಹಕ್ಕಿನ ರಕ್ಷಣೆಗೆ ಬದ್ಧ
ಬಿಹಾರದ ಪಾಟ್ನಾದಲ್ಲಿ ನಡೆದ ಸಿಡಬ್ಲ್ಯೂಸಿ ಸಭೆಯ ನಿರ್ಣಯಗಳಲ್ಲಿ ಪ್ರಮುಖವಾಗಿ "ಸಂವಿಧಾನಬದ್ಧವಾಗಿ ಸಿಕ್ಕಿರುವ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ಹಕ್ಕಿನ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ” ಎಂದು ತಿಳಿಸಿದರು.