ಚುನಾವಣೆ ವೇಳೆಯಲ್ಲೇ ಬಾಂಬ್ ಬ್ಲಾಸ್ಟ್ ಏಕೆ? ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ: ಸಿಎಂ

ಬಾಂಬ್ ಬ್ಲಾಸ್ಟ್‌ಗಳು ಆಗಬಾರದು. ಅಮಾಯಕರ ಜೀವಹಾನಿ ಬೇಸರದ ಸಂಗತಿ. ಭಾರತ ಸಂವಿಧಾನಬದ್ಧ ಬಹುತ್ವದ ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Update: 2025-11-11 07:08 GMT

ಪ್ರಧಾನಿ ಮೋದಿ ಹಾಗೂ ಸಿಎಂ ಸಿದ್ದರಾಮಯ್ಯ

Click the Play button to listen to article

ದೇಶದಲ್ಲಿ ಚುನಾವಣೆಗಳು ನಡೆಯುವ ಸಂದರ್ಭದಲ್ಲಿಯೇ ಬಾಂಬ್ ಸ್ಫೋಟಗಳು ಏಕೆ ಸಂಭವಿಸುತ್ತಿವೆ?"ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಪ್ರಶ್ನೆ ಎತ್ತಿದ್ದಾರೆ. ದೆಹಲಿಯಲ್ಲಿ ನಡೆದ ಸ್ಫೋಟ ಮತ್ತು ಬಿಹಾರ ಚುನಾವಣೆಯ ನಡುವಿನ ಸಂಬಂಧದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ಈ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ನಡೆಸಿ ಉತ್ತರಿಸಬೇಕು. ನಿನ್ನೆಯ ದೆಹಲಿ ಸ್ಫೋಟವು ಇಂದಿನ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರಬಹುದು," ಎಂದು ಅಭಿಪ್ರಾಯಪಟ್ಟರು. ಬಾಂಬ್ ಸ್ಫೋಟಗಳು ನಡೆಯಬಾರದು ಮತ್ತು ಅಮಾಯಕರ ಜೀವಹಾನಿ ಅತ್ಯಂತ ಬೇಸರದ ಸಂಗತಿ ಎಂದು ಅವರು ಹೇಳಿದರು.

ಸೋಮವಾರ ಮೈಸೂರಿನ ತಮ್ಮ ನಿವಾಸದಲ್ಲಿ ನಡೆದ ಕೆಡಿಪಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು ಆಡಳಿತಾತ್ಮಕ ವಿಷಯಗಳ ಬಗ್ಗೆಯೂ ಚರ್ಚಿಸಿದರು.

ನ.15ಕ್ಕೆ ದೆಹಲಿಗೆ ಪ್ರಯಾಣ

ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಕಾರ್ಯಕ್ರಮದಲ್ಲಿ ಭಾಗವಹಿಸಲು ನ.15 ರಂದು ದೆಹಲಿಗೆ ಹೋಗುತ್ತಿದ್ದೇನೆ. ಅಂದೇ ವಾಪಾಸ್ ಬರುವ ಸಾಧ್ಯತೆ ಇದೆ. ಹೈಕಮಾಂಡ್ ಸಮಯ ಕೊಟ್ಟರೆ ಭೇಟಿಯಾಗುತ್ತೇನೆ. ಆದರೆ ಇನ್ನೂ ಹೈ‌ಕಮಾಂಡ್‌ ನಾಯಕರನ್ನು ಸಮಯ ಕೇಳಿಲ್ಲ ಎಂದರು.

ಮೈಸೂರು ಡ್ರಗ್‌ ಮುಕ್ತವಾಗಬೇಕು

ಮೈಸೂರಿನ ಕೆಡಿಪಿ ಸಭೆಯಲ್ಲಿ ಮಾತನಾಡುತ್ತಾ, ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ ಪೊಲೀಸ್ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.

ನ್ಯಾಯಾಲಯದಲ್ಲಿ ಪ್ರಕರಣಗಳು ಇತ್ಯರ್ಥವಾಗಲಿ

ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ‌ ಜಿಲ್ಲೆಯಲ್ಲಿ ಈಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯ ಆಗುತ್ತದೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯವಿದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು. ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀರ್ಘ ಇತ್ಯರ್ಥ ಪಡಿಸಬೇಕು. ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7,540 ರಷ್ಟು ಪ್ರಕಣಗಳು ಇತ್ಯರ್ಥವಾಗಿವೆ. ಉಳಿದವೂ ಬೇಗ ಇತ್ಯರ್ಥವಾಗಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ದಿಡೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಬೇಕು ಎಂದರು.

ಪೊಲೀಸ್ ಅಧಿಕಾರಿಗಳಾಗಳು‌ ಘಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಪರಾಧಿಗಳು, ರಿಯಲ್ ಎಸ್ಟೇಟ್, ರೌಡಿಗಳನ್ನು ಹೊರತುಪಡಿಸಿ ಪೊಲೀಸರು ಸಾರ್ವಜನಿಕರ ಜೊತೆ ಉತ್ತಮ‌ವಾಗಿ ವರ್ತಿಸಬೇಕು. ಅಭಿವೃದ್ಧಿ ಕಾರ್ಯಗಳು, ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲಿ

ಗ್ರೇಟರ್ ಮೈಸೂರು ಬಗ್ಗೆ ಪ್ರಾಥಮಿಕ ಚರ್ಚೆಯಾಗಿದೆ. ಇನ್ನಷ್ಟು ಸಮಗ್ರ ಚರ್ಚೆ ಬಳಿಕ ಸಚಿವ ಸಂಪುಟದಲ್ಲಿಟ್ಟು ಚರ್ಚಿಸಲಾಗುವುದು. ಸಂಪುಟದ ತೀರ್ಮಾನದಂತೆ ನಿರ್ಧಾರ ಮಾಡಲಾಗುವುದು. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ, ಇದನ್ನು ನಾನು ಸಹಿಸುವುದಿಲ್ಲ. ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಶಿಕ್ಷಣ ಸೂಚ್ಯಂಕದಲ್ಲಿ ಕುಸಿತ

ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಸರಿಯಲ್ಲ. ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗಧಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿ ಜೊತೆಗೆ ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್‌ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಇನ್ಸ್‌ಪೆಕ್ಟರ್‌ಗಳು, ಪಿಡಿಒಗಳು, ವಿಎಗಳ ಮೇಲೆ  ಹೆಚ್ಚು ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ ಕಚೇರಿಗಳಿಗೆ ಗೌಪ್ಯವಾಗಿ ಭೇಟಿ ನೀಡಿದರೆ ಬೇಜವಬ್ದಾರಿಯುತ ಅಧಿಕಾರಿಗಳು ಮತ್ತು ಸಿಬ್ಬಂದಿ ಸಿಕ್ಕಿ ಬೀಳುತ್ತಾರೆ ಎಂದರು.

ಜಂಟಿ ಸಮೀಕ್ಷೆ ಬಳಿಕ ಖಾತೆಗೆ ಹಣ

ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಚಟುವಟಿಗೆ ತೊಂದರೆ ಇಲ್ಲ. ಕುಡಿಯುವ ನೀರಿಗೂ ತೊಂದರೆ ಆಗುವುದಿಲ್ಲ. ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚು ನೀರು ಬಿಡಲಾಗಿದೆ. ಜಂಟಿ ಸಮೀಕ್ಷೆ ಬಳಿಕ ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡವರ ಖಾತೆಗೆ ಹಣ ವರ್ಗಾವಣೆಯಾಗಲಿದೆ. ಕೃಷಿ, ತೋಟಗಾರಿಕೆ, ನೀರಾವರಿ ಇಲಾಖೆಗಳ ಅಧಿಕಾರಿಗಳು ಜಂಟಿ ಸಭೆ ಮಾಡಿ ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳಬೇಕು ಎಂದರು.

ಹುರುಳಿ, ಮುಸುಕಿನ ಜೋಳ ಬಿತ್ತನೆ ಇನ್ನೂ ಆಗಬೇಕಿದೆ. ಕೆಲವು ರೈತರು ಬೆಳೆಯನ್ನು ಬದಲಾಯಿಸಿದ್ದಾರೆ. ಗೊಬ್ಬರ, ಬೀಜ ನಮ್ಮಲ್ಲಿ ಸಂಗ್ರಹವಿದೆ. ರೈತರಿಗೆ ಅಗತ್ಯಕ್ಕಿಂತ ಹೆಚ್ಚು ಗೊಬ್ಬರವನ್ನೂ ದಾಸ್ತಾನು ಮಾಡಿಟ್ಟುಕೊಂಡಿದ್ದೇವೆ. ಯೂರಿಯಾ ಅಗತ್ಯ ಇರುವುದಕ್ಕಿಂತ ಹೆಚ್ಚು ಸಂಗ್ರಹವಿದೆ. ಕುರಿಗಾಹಿಗಳಿಗೆ ಆಗುತ್ತಿದ್ದ ತೊಂದರೆಗಳು ಮತ್ತು ಕಳ್ಳ ಕಾಕರಿಂದ ರಕ್ಷಣೆ ಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ ಎಂದು ಮಾಹಿತಿ ನೀಡಿದರು.

ಮಾನವ-ಹುಲಿ ಸಂಘರ್ಷದ ಬಗ್ಗೆ ಚರ್ಚೆ

ಹುಲಿ, ಆನೆಗಳು ಸೇರಿದಂತೆ ಇತರೆ ಪ್ರಾಣಿಗಳು ಅರಣ್ಯದಿಂದ ಹೊರಗೆ ಬರಿತ್ತಿದ್ದು, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ. ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು.‌ ಲಾಂಟೆನಾ ತೆಗೆಸಬೇಕು. ಅರಣ್ಯದಲ್ಲಿ ಮೇವು ಬೆಳೆಸಬೇಕು. ಆನೆ, ಹುಲಿಗಳು ಹೊರಗೆ ಬರುವ ಬಗ್ಗೆ ನಿರಂತರ ನಿಗಾ ವಹಿಸಬೇಕು. ಅರಣ್ಯ ಹಕ್ಕು ಕಾಯ್ದೆಗೆ ಬಂದಿರುವ 7,000 ಅರ್ಜಿಗಳಲ್ಲಿ 5,900 ಅರ್ಜಿಗಳು ತಿರಸ್ಕರಿಸಲ್ಪಟ್ಟಿರುವುದಕ್ಕೆ ಕಾರಣ ಏನು ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಹಾಡಿಗಳಿಗೆ ಮೂಲಸೌಕರ್ಯ ಒದಗಿಸಿ

ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಮರ್ಪಕವಾಗಿ ಪೂರೈಸಲು ಸೂಚನೆ ನೀಡಲಾಗಿದೆ. ಹಾಡಿಗಳು, ಅರಣ್ಯವಾಸಿಗಳ ವಿಚಾರದಲ್ಲಿ ಅಂತಃಕರಣದಿಂದ ವರ್ತಿಸಿ ಎನ್ನುವ ಸೂಚನೆ ನೀಡಿದ್ದೇನೆ. ಅಧಿಕಾರಿಗಳ ಹೊಂದಾಣಿಕೆ ಕೊರತೆಯಿಂದ, ಕರ್ತವ್ಯಲೋಪದಿಂದ ಮಾನವ ಜೀವ ಹಾನಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಹೆಚ್‌.ಡಿ.ಕೋಟೆ ವ್ಯಾಪ್ತಿಯ ಹಾಡಿಗಳಲ್ಲಿನ 16 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಆದರೆ ವಿದ್ಯುತ್‌ ಮಾತ್ರ ಬರುತ್ತಿಲ್ಲ ಎಂದರು.

Tags:    

Similar News