Bomb Threat | ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಸಂದೇಶ ಕಳುಹಿಸಲಾಗಿದೆ.;
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಸಂದೇಶ ಕಳುಹಿಸಲಾಗಿದೆ.
ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ, ತಪಾಸಣೆ ವೇಳೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ತಮಿಳುನಾಡಿನ ಎರಡು ವಿವಾದಾತ್ಮಕ ಪ್ರಕರಣಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಇಮೇಲ್ ಒಳಗೊಂಡಿದೆ ಎಂದು ವರದಿಯಾಗಿದೆ. ಡ್ರಗ್ ಕಿಂಗ್‌ಪಿನ್ ಜಾಫರ್ ಸಾದಿಕ್ ಮತ್ತು ತಮಿಳುನಾಡಿನ ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಪತ್ನಿ ಹಾಗೂ ಚಲನಚಿತ್ರ ನಿರ್ಮಾಪಕಿ ಕೃತಿಕಾ ಉದಯನಿಧಿ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಹಾಗೂ ಈಗ ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿ ಬಂಧಿಯಾಗಿರುವ ಟಿಎನ್‌ಎಲ್‌ಎ ಭಯೋತ್ಪಾದಕ ಗುಂಪಿನ ಮುಖ್ಯಸ್ಥ ಎಸ್.ಮಾರನ್ ಅವರನ್ನು ಬಿಡುಗಡೆ ಮಾಡುವಂತೆಯೂ ಇ-ಮೇಲ್ ನಲ್ಲಿ ಒತ್ತಾಯಿಸಲಾಗಿದೆ ಎನ್ನಲಾಗಿದೆ.
ಬೆದರಿಕೆಯ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದಾರೆ.
ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಬಂದಿತ್ತು.