ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್.ಪಾಟೀಲ್ ನೇಮಕ
ರಾಜ್ಯ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಫೆ.1 ರಂದು ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್.ಪಾಟೀಲ್ ಅವರು ರಾಜೀನಾಮೆ ನೀಡಿದ್ದರು.;
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಕಲಬುರಗಿ ಜಿಲ್ಲೆಯ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ.
ರಾಜ್ಯ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಫೆ.1 ರಂದು ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್.ಪಾಟೀಲ್ ಅವರು ರಾಜೀನಾಮೆ ನೀಡಿದ್ದರು. ಇದೀಗ ಅಸಮಾಧಾನಗೊಂಡ ಶಾಸಕರ ಮನವೊಲಿಕೆಗೆ ಮುಂದಾಗಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊಸ ಹುದ್ದೆಯ ಜೊತೆಗೆ ಸಂಪುಟ ದರ್ಜೆ ಸ್ಥಾನಮಾನ ಮತ್ತು ಇತರೆ ಸೌಲಭ್ಯಗಳನ್ನು ಕಲ್ಪಿಸಿದೆ.
ಪಕ್ಷದ ಹಿರಿಯ ಶಾಸಕರನ್ನು ಕಡೆಗಣಿಸಲಾಗುತ್ತಿದೆ ಎಂದು ಈ ಹಿಂದೆ ಕೂಡ ಶಾಸಕರಾದ ಬಸವರಾಜ್ ರಾಯರೆಡ್ಡಿ, ಆರ್.ವಿ.ದೇಶಪಾಂಡೆ ಹಾಗೂ ಬಿ.ಆರ್.ಪಾಟೀಲ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ, ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಾಗೂ ಬಿ.ಆರ್. ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರನ್ನಾಗಿ ನೇಮಿಸಿತ್ತು.
ಬಿ.ಆರ್. ಪಾಟೀಲ್ ಅವರು ಕಳೆದ ಫೆ.1ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಸ್ವೀಕರಿಸಿರಲಿಲ್ಲ. ಈಗ ಅವರನ್ನು ಮನವೊಲಿಸುವ ಸಲುವಾಗಿ ನೀತಿ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಆಳಂದ ಕ್ಷೇತ್ರಕ್ಕೆ ವಿಶೇಷ ಪ್ಯಾಕೇಜ್ ನೀಡಿಲ್ಲ. ಪಕ್ಷದಲ್ಲಿ ಹಿರಿಯ ಸಚಿವರಾಗಿದ್ದರೂ ಸಚಿವ ಸ್ಥಾನಕ್ಕೆ ಪರಿಗಣಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿ ಬಿ.ಆರ್.ಪಾಟೀಲ್ ಅವರು ರಾಜೀನಾಮೆ ನೀಡಿ ಆಕ್ರೋಶ ಹೊರಹಾಕಿದ್ದರು.