BSY POCSO CASE | ದೂರುದಾರ ಮಹಿಳೆಯ ಸಾವಿನ ತನಿಖೆಗೆ ಮಹಿಳಾ ಆಯೋಗ ಪತ್ರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.

Update: 2024-09-03 07:25 GMT
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ
Click the Play button to listen to article

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಪತ್ರ ಬರೆದಿದ್ದಾರೆ.

ಈ ಬಗ್ಗೆ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮೀ ಚೌಧರಿ ಆಗ್ರಹಿಸಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿದ್ದಾರೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮಹಿಳೆಯ ಸಾವು ಪ್ರಕರಣ ದಾಖಲಾಗಿದೆ. 

ದೂರುದಾರ ಮಹಿಳೆ, ದೂರು ದಾಖಲಿಸಿ ಕೆಲವೇ ದಿನಗಳಲ್ಲಿ ದಿಢೀರ್‌ ಸಾವು ಕಂಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಆ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗ, ಇದೀಗ ಸಾವಿನ ತನಖೆ ನಡೆಸಿ ವರದಿ ಸಲ್ಲಿಸುವಂತೆ ಬೆಂಗಳೂರು ಪೊಲೀಸ್‌ ಮುಖ್ಯಸ್ಥರಿಗೆ ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಿದೆ.

ಪ್ರಕರಣವೇನು? 

ಕಳೆದ ಫೆ.2ರಂದು ಸಹಾಯ ಕೇಳಲು ಹೋದಾಗ ಯಡಿಯೂರಪ್ಪನವರು ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು. ಆದರೆ, ದೂರುದಾರ ಮಹಿಳೆ ಮೇ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಯಿಂದಾಗಿ ಹುಳಿಮಾವು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ನಿತ್ರಾಣಗೊಂಡು ಸಾವನ್ನಪ್ಪಿದ್ದರು. ಶ್ವಾಸಕೋಶದ ಕ್ಯಾನ್ಸರ್‌ನಿಂದ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾಗಿ ವರದಿಯಾಗಿತ್ತು.

ಮಹಿಳೆಯ ಸಾವು ಹಾಗೂ ಸಾವಿನ ನಂತರ ಮರಣೋತ್ತರ ಪರೀಕ್ಷೆ ನಡೆದಿರುವುದರ ಕುರಿತು ಅನುಮಾನಗಳಿವೆ ಎಂದು ಹೇಳಿರುವ ಮಹಿಳಾ ಆಯೋಗ, ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರದ ಮೂಲಕ ಮನವಿ ಮಾಡಿದೆ. 

Tags:    

Similar News