BSY POCSO CASE | ಬಿಎಸ್‌ವೈ ಬಂಧನ ತಡೆ ಆದೇಶ ವಿಸ್ತರಣೆ
ಪೋಕ್ಸೋ ಪ್ರಕರಣದಲ್ಲಿ, 'ಪೊಲೀಸರು ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ' ಎಂಬ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ.;
ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣದಲ್ಲಿ, 'ಪೊಲೀಸರು ಅವರನ್ನು ಬಂಧಿಸಬಾರದು ಮತ್ತು ವಿಚಾರಣೆಗಾಗಿ ಖುದ್ದು ಹಾಜರಾತಿಯಿಂದ ಅವರಿಗೆ ವಿನಾಯಿತಿ ನೀಡಲಾಗಿದೆ' ಎಂಬ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ರಿಟ್ ಅರ್ಜಿಯನ್ನು, 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು.
ವಿಚಾರಣೆ ವೇಳೆ ಹಿರಿಯ ವಕೀಲರೂ ಆದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್, 'ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012) ಕಲಂ 35ರ ಪ್ರಕಾರ ಅಪರಾಧದ ಆರೋಪವನ್ನು ಪರಿಗಣಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಆದ್ದರಿಂದ, ಈ ಹಿಂದೆ ನೀಡಿರುವ ತಡೆ ಆದೇಶ ತೆರವುಗೊಳಿಸಬೇಕು' ಎಂದು ಮನವಿ ಮಾಡಿದರು. ಆದರೆ ಇದನ್ನು ಒಪ್ಪದ ನ್ಯಾಯಪೀಠ, 'ಒಟ್ಟಿಗೇ ಎಲ್ಲವನ್ನೂ ಸೇರಿಸಿ ಗೊಂದಲ ಮಾಡಿಕೊಳ್ಳುವುದು ಬೇಡ. ವಿಚಾರಣೆ ನಡೆಸಿ ಇತ್ಯರ್ಥಪಡಿಸೋಣ' ಎಂದು ಹೇಳಿ ಸೆ. 27ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿತು. ಈ ಮೊದಲಿನ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಅವರೂ ಹಾಜರಿದ್ದರು.
ಏನಿದು ಪ್ರಕರಣ?
ತನ್ನ 17 ವರ್ಷದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 53 ವರ್ಷದ ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತಮ್ಮ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ನ್ಯಾಯಕ್ಕಾಗಿ ಸಹಾಯ ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಬಳಿ ಹೋಗಿದ್ದಾಗ ಮಾಜಿ ಮುಖ್ಯಮಂತ್ರಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದರು. ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಮನೆಗೆ ತೆರಳಿ ಸಹಾಯ ಕೇಳಿದಾಗ ಅವರು ನನ್ನ ಪುತ್ರಿಯನ್ನು ಪ್ರತ್ಯೇಕ ಕೊಠಡಿಯೊಳಕ್ಕೆ ಕರೆದೊಯ್ದು ನನ್ನ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಒಂದಿಷ್ಟು ಹಣ ನೀಡಿದ್ದರು ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದರು.
ದೂರಿನ ಆಧಾರದ ಮೇಲೆ ಸದಾಶಿವ ನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಆ ಮಹಿಳೆಯ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಲಾಗಿದ್ದ ವಿಡಿಯೋ ತುಣುಕುಗಳನ್ನು ಯಡಿಯೂರಪ್ಪ ಅವರ ಬೆಂಬಲಿಗರು ಬಲವಂತವಾಗಿ ಅಳಿಸಿ ಹಾಕಿದ್ದರು. ಆ ಮಹಿಳೆಯ ದೂರು ದಾಖಲಾದ ಕೆಲವೇ ದಿನಗಳಲ್ಲಿ ನಿಗೂಢವಾಗಿ ಸಾವು ಕಂಡಿದ್ದಾರೆ.