Building collapse | ಸಿಎಂ ಸ್ಥಳ ಭೇಟಿ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಹಾರ ಘೋಷಿಸಿದರು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಯಗೊಂಡವರಿಗೆ ಚಿಕಿತ್ಸೆ ಜೊತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ ನಡೆಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8 ಜನರನ್ನು ರಕ್ಷಣೆ ಮಾಡಲಾಗಿದೆ. ಅವರಲ್ಲಿ ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದವರಿಗೆ ಗಂಭೀರ ಗಾಯಗಳಾಗಿವೆ. ಅವರ ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತಿದೆ ಎಂದು ಹೇಳಿದರು.
ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಕಾರ್ಮಿಕ ಇಲಾಖೆ, 3 ಲಕ್ಷ ಬಿಬಿಎಂಪಿಯಿಂದ ಸೇರಿ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಇದು ಕಂದಾಯ ಬಡಾವಣೆಯಾಗಿದ್ದು, ಈ ಕಟ್ಟಡವನ್ನು ಅನಧಿಕೃತವಾಗಿ ಪರವಾನಗಿ ಪಡೆಯದೇ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ನೋಟಿಸ್ ನೀಡಿದ್ದರೂ, ನಿರ್ಮಾಣ ಮಾಡಿರುವುದರಿಂದ ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿ ಹಾಗೂ ಎಕ್ಸಿಕ್ಯೂಟಿವ್ ಎಂಜಿನಿಯರ್ ಅವರಿಗೂ ನೋಟೀಸ್ ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚ ಭರಿಸುವ ಜೊತೆಗೆ ಪರಿಹಾರವನ್ನೂ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು.
ಅನಧಿಕೃತ ಕಾಮಗಾರಿ ನಡೆಸದಂತೆ ಸಿಎಂ ಮನವಿ
ಜನರು ಕಾನೂನಿನ ಪ್ರಕಾರ ಮನೆಗಳನ್ನು ನಿರ್ಮಿಸಬೇಕೇ ಹೊರತು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಬಾರದೆಂದು ಜನರಲ್ಲಿ ಸಿಎಂ ಮನವಿ ಮಾಡಿದರು. ಕಾಮಗಾರಿ ನಿಲ್ಲಿಸುವಂತೆ ನೋಟೀಸ್ ನೀಡಿದ ನಂತರವೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸದ ಕಾರಣ ಈ ದುರಾದೃಷ್ಟಕರ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು, ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು. ಎಇಇ ಅವರಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೇ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಹೇಳಿದರು.
ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ
ಸರ್ಕಾರ ಮಳೆ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಟೀಕೆ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಟೀಕೆಗಳನ್ನು ಮಾಡುವುದು ಸುಲಭ. ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು , ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ. ನೂರಾರು ವರ್ಷಗಳಲ್ಲಿ ಯಲಹಂಕದಲ್ಲಿ ಒಂದೇ ದಿನ 170 ಮಿ.ಮೀ. ಮಳೆ ಬಿದ್ದಿದೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಸರ್ಕಾರಕ್ಕೆ ಇರಬೇಕಾಗುತ್ತದೆ. ಆ ಭಾಗದಲ್ಲಿ ಸುಮಾರು ಸಾವಿರಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಈ ವರ್ಷ ಮಳೆ ಜಾಸ್ತಿ ಆಗಿದ್ದು, ಇನ್ನೂ ಹೆಚ್ಚು ಮೂಲಸೌಕರ್ಯಗಳ ಅಭಿವೃದ್ಧಿ ಆಗಬೇಕಿದೆ. ರಾಜಕಾಲುವೆಗಳಲ್ಲಿ ಒತ್ತುವರಿ ಕ್ಲಿಯರ್ ಮಾಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಪತ್ತುನಿರ್ವಹಣೆಗಾಗಿ 3 ಸಾವಿರ ಕೋಟಿ ರೂ.ಗಳ ಸಾಲವನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನಧಿಕೃತ ಕಟ್ಟಡಗಳ ಸಮೀಕ್ಷೆ ನಡೆಸಲಾಗಿದ್ದರ ವಸ್ತುಸ್ಥಿತಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಸರ್ಕಾರವಿದ್ದರೂ, ಇಂತಹ ವಿಷಯಗಳು ಪ್ರಸ್ತುತವಾಗಿರುತ್ತವೆ. ಕೆಲವರು ಈ ಬಗ್ಗೆ ಕಾನೂನು ಮೊರೆ ಹೋಗಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.
ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಚನ್ನಪಟ್ಟಣ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಸಿಪಿ ಯೋಗೇಶ್ವರ್, ಡಿಸಿಎಂನೊಂದಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಕೇಂದ್ರದಿಂದ ತಲಾ 2ಲಕ್ಷ ಪರಿಹಾರ ಘೋಷಣೆ
ಬಾಬುಸಾಪಾಳ್ಯ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಎರಡು ಲಕ್ಷ ರೂ. ಪರಿಹಾರ ಘೋಷಿಸಿದೆ.
ಮೃತಪಟ್ಟ 8 ಕಾರ್ಮಿಕರ ಕುಟುಂಬದವರಿಗೆ ತಲಾ 2 ಲಕ್ಷ ರೂ., ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ ಮಾಡಿದೆ.
ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹೇಳಿದ್ದಾರೆ.
ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಬಾಬುಸಾಪಾಳ್ಯದಲ್ಲಿ ಭೀಕರ ಕಟ್ಟಡ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಒಟ್ಟು 14 ಜನರನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಮೃತರಲ್ಲಿ ಬಿಹಾರ ಮೂಲದ ಅರ್ಮಾನ್, ಮೊಹಮ್ಮದ್ ಸಾಹೀಲ್, ಶ್ರೀರಾನ್ ಕಿರುಪಾಲ್, ಸೋಲೋ ಪಾಸ್ವಾನ್, ತಮಿಳುನಾಡು ಮೂಲದ ಮಣಿಕಂಠನ್, ಸತ್ಯಾರಾಜು, ಆಂಧ್ರ ಮೂಲದ ತುಳುಸಿರೆಡ್ಡಿ, ಉತ್ತರ ಪ್ರದೇಶದ ಪುಲ್ಚನ್ ಯಾದವ್ ಎಂಬುವರ ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಅವಶೇಷಗಳಡಿ ಸಿಲುಕಿರುವ ಏಳುಮಲೈ ಮತ್ತು ಗಜೇಂದ್ರ ಅವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ.
ಇನ್ನು ಘಟನೆಗೆ ಸಂಬಂಧಿಸಿ ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ, ಮೋಹನ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಬಿಎಂಪಿ ವಲಯ ಆಯುಕ್ತ ರಮೇಶ್, ಎಇ ರಮೇಶ್ ಅವರನ್ನು ತರಾಟೆಗೆ ತೆಗೆದುಕೊಂಡು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯವಿರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಸಿ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದರು.